.jpg)
ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ: ಕಾಂಗ್ರೆಸ್ ಪ್ರತಿಭಟನೆ
Tuesday, July 23, 2024
ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ: ಕಾಂಗ್ರೆಸ್ ಪ್ರತಿಭಟನೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಉಡುಪಿ ಜಿಲ್ಲೆಯ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಕಾಂಗ್ರೆಸ್ ಮುಂದಾಳು ಮುನಿಯಾಲು ಉದಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ನಿಜ ಮಾಡುವ ಕಲೆ ಸುನಿಲ್ ಕುಮಾರ್ ಅವರಿಗಿದೆ.
ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿದ್ದೇನೆ. ಮೂರ್ತಿ ನಿರ್ಮಾಣಕ್ಕೆ ಎಷ್ಟು ಸಮಯ ಬೇಕಾಗುತ್ತದೆ ಎಂದು ನನಗೂ ಗೊತ್ತಿದೆ.
ಕೇವಲ 3 ತಿಂಗಳಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ.
ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ.
ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.
ಕಾರ್ಕಳ ಬೈಲೂರು ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ತನಿಖೆ ಮಾಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವರಾದ ರಮಾನಾಥ ರೈ, ಜಯಪ್ರಕಾಶ ಹೆಗ್ಡೆ ಮತ್ತು ವಿನಯಕುಮಾರ್ ಸೊರಕೆ, ಶಾಸಕ ಅಶೋಕ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜ ಮೊದಲಾದವರಿದ್ದರು.