
ಶಾಲಾ ಶೌಚಾಲಯ ಸ್ವಚ್ಛತೆಗೆ ಸಿಬ್ಬಂದಿ ನಿಯೋಜನೆಗೆ ಮನವಿ
Thursday, July 18, 2024
ಶಾಲಾ ಶೌಚಾಲಯ ಸ್ವಚ್ಛತೆಗೆ ಸಿಬ್ಬಂದಿ ನಿಯೋಜನೆಗೆ ಮನವಿ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಸರಕಾರಿ ಶಾಲಾ, ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಜೊತೆಗೆ ಶೌಚಾಲಯ ನೈರ್ಮಲ್ಯದ ಹೊಣೆಗಾರಿಕೆ ವಹಿಸಬೇಕಾದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಶಾಲೆಗಳ ಶೌಚಾಲಯ ಸ್ವಚ್ಛತೆಗೆ ಸ್ಥಳೀಯಾಡಳಿತದ ಮೂಲಕ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಪತ್ರ ಬರೆದು ವಿನಂತಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲಾ ಶೌಚಾಲಯಗಳ ಸ್ವಚ್ಛತೆ ಅತ್ಯಾವಶ್ಯಕವಾಗಿದ್ದು, ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ವಿದ್ಯಾರ್ಥಿಗಳು ನಿರ್ವಹಿಸಿದ ಘಟನೆಗಳು ಆಗಾಗ ಮಾಧ್ಯಮಗಳಲ್ಲಿ ವರದಿಯಾಗಿದೆ.
ಶೌಚಾಲಯಗಳ ಸ್ವಚ್ಛತೆಯನ್ನು ಶಾಲಾ ಮಕ್ಕಳ ಮೂಲಕ ಮಾಡಿಸುವುದು ಸಮಂಜಸವಲ್ಲ. ಅಲ್ಲದೇ, ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆ, ಅವರ ಸರ್ವಾಂಗೀಣ ಬೆಳವಣಿಗೆ ಮತ್ತು ಉತ್ತಮ ಫಲಿತಾಂಶ ಮತ್ತಿತರ ಮಹತ್ತರ ಜವಾಬ್ದಾರಿ ಹೊಂದಿರುವ ಶಿಕ್ಷಕರಿಗೆ ಸ್ವಚ್ಛತಾ ಕಾರ್ಯದ ಜವಾಬ್ದಾರಿ ನೀಡುವುದೂ ಸರಿಯಲ್ಲ.
ಶಾಲಾ ಶೌಚಾಲಯಗಳ ಸ್ವಚ್ಛತೆಯನ್ನು ನಿರಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆಗಳ ಮುಖಾಂತರ ಹೊರ ಗುತ್ತಿಗೆ ಸಿಬ್ಬಂದಿಗಳ ಮೂಲಕ ಸೂಕ್ತ ಅನುದಾನ ನೀಡಿ ಸ್ವಚ್ಛತಾ ಕಾರ್ಯ ನಿರ್ವಹಿಸಲು ಯೋಜನೆ ರೂಪಿಸಿ ಸ್ವಚ್ಛತೆಗೆ ಶಾಶ್ವತ ವ್ಯವಸ್ಥೆ ಮಾಡುವಂತೆ ಶಾಸಕ ಯಶಪಾಲ್ ಮನವಿ ಮಾಡಿದ್ದಾರೆ.