-->
ವಚನ ಸಾಹಿತ್ಯದಿಂದ ಸಮಾಜ ಸುಧಾರಣೆ

ವಚನ ಸಾಹಿತ್ಯದಿಂದ ಸಮಾಜ ಸುಧಾರಣೆ

ವಚನ ಸಾಹಿತ್ಯದಿಂದ ಸಮಾಜ ಸುಧಾರಣೆ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ


ಶಿವ ಶರಣರು ರಚಿಸಿದ ವಚನ ಸಾಹಿತ್ಯ ಕೇವಲ ಸಾಮಾಜಿಕವಾಗಿ ಮಾತ್ರವಲ್ಲದೆ ಸಾಹಿತ್ಯಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಹೇಳಿದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಬಸವಣ್ಣನವರ ವಿಶ್ವಾಸದ ನಿಷ್ಠಾವಂತ ಆಪ್ತ ಕಾರ್ಯದರ್ಶಿಯಾಗಿ, ಅವರ ಯಶಸ್ಸಿನ  ಶಕ್ತಿಯಾಗಿ ಹಡಪದ ಅಪ್ಪಣ್ಣ ಗುರುತಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವಚನಕಾರರ ವಚನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.


ಸಾಂಸ್ಕೃತಿಕ ಚಿಂತಕ ಡಾ. ಶ್ರೀಕಾಂತ ಸಿದ್ದಾಪುರ ಉಪನ್ಯಾಸ ನೀಡಿ, 12ನೇ ಶತಮಾನದ ಮಹತ್ವಪೂರ್ಣ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯ ಬಸವಾದಿ ಶರಣರು ಮೇಲು ಕೀಳು, ಜಾತಿ ಪದ್ಧತಿ, ಮೌಲ್ಯ, ಕಂದಾಚಾರಗಳ ವಿರುದ್ಧ ಧ್ವನಿ ಎತ್ತಿ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಕಿದರು ಎಂದರು.


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ., ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ನರಸಿಂಹಮೂರ್ತಿ ಮೊದಲಾದವರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ಶಶಿಧರ್ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ವಂದಿಸಿದರು.

Ads on article

Advertise in articles 1

advertising articles 2

Advertise under the article