.jpg)
ಉಡುಪಿ: ಮುಂದುವರಿದ ವರುಣಾರ್ಭಟ
Thursday, July 18, 2024
ಉಡುಪಿ: ಮುಂದುವರಿದ ವರುಣಾರ್ಭಟ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಜಿಲ್ಲೆಯಲ್ಲಿ ಪುನರ್ವಸು ಮಳೆ ಆರ್ಭಟ ಗುರುವಾರವೂ ಮುಂದುವರಿದಿದೆ. ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.
ಕುಂದಾಪುರ, ಬೈಂದೂರು ಭಾಗದಲ್ಲಿ ಭಾರೀ ನೆರೆ ಹಾವಳಿ ಕಂಡುಬಂದಿದ್ದು, ಬೈಂದೂರು ಪ್ರದೇಶದ ಸುಮಾರು 30 ಮನೆಗಳು ಸಂಪರ್ಕ ಕಡಿದುಕೊಂಡಿವೆ. ಬೈಂದೂರು ತಾಲೂಕಿನ ಸೋಮೇಶ್ವರದಲ್ಲಿ ಗುಡ್ಡೆ ಕುಸಿಯುವ ಭೀತಿ ಆವರಿಸಿದೆ.
ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದ್ದರೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೈಂದೂರು ಮತ್ತು ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ನೀಡಲಾಗಿತ್ತು. ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮಳೆಯೊಂದಿಗೆ ಗಾಳಿಯೂ ಬೀಸುತ್ತಿದ್ದು ಕೆಲವೆಡೆ ಮರಗಳು ಬಿದ್ದಿವೆ. ಕುಂದಾಪುರ ಬೇಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಗಾಳಿ ಮಳೆಗೆ ಮನೆಗಳಿಗೆ ಹಾಗೂ ಕೃಷಿ ಹಾನಿಯಾಗಿದ್ದು ಸುಮಾರು 23 ಲಕ್ಷ ರೂ. ನಷ್ಟ ಸಂಭವಿಸಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 86.8 ಮಿ.ಮೀ. ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ವೇಗದ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ನದಿ ಮತ್ತು ಸಮುದ್ರತೀರ ವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.