-->
ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ಅವಕಾಶ ಕಲ್ಪಿಸಿ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ಅವಕಾಶ ಕಲ್ಪಿಸಿ

ಲೋಕಬಂಧು ನ್ಯೂಸ್, ಉಡುಪಿ
ಮಕ್ಕಳ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಪ್ರಕೃತಿಯ ಅಸಮತೋಲನಕ್ಕೆ ಮುಖ್ಯ ಕಾರಣ ಮನುಷ್ಯ. ಆತನ ಅಭಿವೃದ್ಧಿಯ ವೇಗದಿಂದಾಗಿ ಪ್ರಕೃತಿ ನಲುಗಿಹೋಗುತ್ತಿದೆ. ಪರಿಸರ ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕರರ ಜವಾಬ್ದಾರಿಯಾಗಿದ್ದು, ಪರಿಸರ ಉಳಿಸುವುದರೊಂದಿಗೆ ಸಕಲ ಜೀವಿಗಳ ಉಳಿವಿಗೆ ಕಾರಣರಾಗಿ ಎಂದ ಅವರು, ಮಕ್ಕಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು.


ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು ಪಾಲಕರು ಮುಕ್ತ ಅವಕಾಶ ಮಾಡಿಕೊಡಬೇಕು ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮಾತನಾಡಿ, ಮಕ್ಕಳಲ್ಲಿ ಅವರದ್ದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ, ಪ್ರೇರೇಪಿಸುವ ಕೆಲಸವನ್ನು ಪೋಷಕರು ಮಾಡಬೇಕು.


ಪ್ರಕೃತಿಯ ಮಹತ್ವದ ಕುರಿತು ಮಕ್ಕಳಿಗೆ ಪರಿಚಯ ಮಾಡಿಸಬೇಕು. ಅದರಿಂದ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಅವರು ತೊಡಗಿಕೊಳ್ಳುತ್ತಾರೆ ಎಂದರು.


ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ. ಮಾತನಾಡಿ, ಸಮಾಜದ ಅಭಿವೃದ್ಧಿಗೆ ಮಕ್ಕಳ ಕೊಡುಗೆ ಅಪಾರ. ಹೊಸ ಹೊಸ ಆವಿಷ್ಕಾರಗಳಿಗೆ ತೆರೆದುಕೊಳ್ಳಲು ಮಕ್ಕಳಿಗೆ ಪೂರಕ ವಾತಾವರಣ ಕಲ್ಪಿಸಬೇಕು. ಅವರ ಅಭಿರುಚಿಗಳನ್ನು ಪುರಸ್ಕರಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು, ಗುರು ಹಿರಿಯರು ಮಾಡಬೇಕು ಎಂದರು.


ಅಧ್ಯಕ್ಷತೆ ವಹಿಸಿದ್ದ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಕ್ಕಳು ಪೋಷಕರನ್ನು ಪ್ರೀತಿಸಿ ಗುರು ಹಿರಿಯರನ್ನು ಗೌರವಿಸಿ, ದೇಶದ ಸತ್ಪ್ರಜೆಗಳಾಗಿ ಬಾಳಿ ಎಂದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ಮಕ್ಕಳ ವಾರ್ಡ್ ಕ್ಲಬ್‌ ಅಧ್ಯಕ್ಷೆ ಸುಮನಾ ಮೊದಲಾದವರಿದ್ದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ. ಸ್ವಾಗತಿಸಿದರು. ದೀಪಾ ನಿರೂಪಿಸಿ, ಶ್ವೇತಾ ವಂದಿಸಿದರು.


ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ಣಾಟಕ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆ ಹಾಗೂ ವಾದ್ಯ ಸಂಗೀತ ಸ್ಪರ್ಧೆಗಳು ನಡೆದವು.
ಮಕ್ಕಳು ರಚಿಸಿದ ಕ್ರಾಫ್ಟ್ ಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

Ads on article

Advertise in articles 1

advertising articles 2

Advertise under the article