ವಕ್ಫ್ : ರೈತರಿಗೆ ನೀಡಿದ ನೋಟೀಸ್ ತಕ್ಷಣ ವಾಪಸ್- ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Saturday, November 2, 2024
ಲೋಕಬಂಧು ನ್ಯೂಸ್, ಬೆಂಗಳೂರು
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ನ.2ರಂದು ಸುದೀರ್ಘ ಸಭೆ ನಡೆಸಿದರು.
ವಕ್ಫ್ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್ ವಿಚಾರದಲ್ಲಿ ಕೆಲವು ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಕೆಂಡಾಮಂಡಲವಾದರು.
ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದಂತೆ ಜನತೆಯಲ್ಲಿ ಮನವಿ ಮಾಡಿದರು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆಯಾಗುವ ಯಾವುದೇ ತೀರ್ಮಾನ ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.
ಸಭೆಯ ನಿರ್ಣಯ
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು.
ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.
ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿ ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್ ಮಂಡಳಿ ಸಿಇಒ ಜಿಲಾನಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಅಲ್ಫಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಮೊದಲಾದವರಿದ್ದರು.