-->
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಆಗ್ರಹ

ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಆಗ್ರಹ

ಲೋಕಬಂಧು ನ್ಯೂಸ್
ಉಡುಪಿ, ಫೆ.27: ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಪ್ರಸಕ್ತ ಸಾಲಿನ ಆಯ-ವ್ಯಯದಲ್ಲಿ ಅನುದಾನ ಒದಗಿಸಿ ಅನುಮೋದನೆ ನೀಡುವಂತೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಆಗ್ರಹಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ ಮಾತನಾಡಿ, ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಕರಾವಳಿ ಭಾಗದ ಉಭಯ ಜಿಲ್ಲೆಗಳ ರೈತರ ಬಹುದಿನದ ಬೇಡಿಕೆಯಾಗಿದೆ. ಪ್ರಸ್ತುತ ಇರುವ ಡಿಪ್ಲೋಮಾ ಕಾಲೇಜನ್ನು ಉನ್ನತೀಕರಿಸಿ ಕೃಷಿ ಮಹಾವಿದ್ಯಾಲಯವನ್ನಾಗಿ ಪರಿವರ್ತಿಸುವುದು ಈ ಭಾಗದ ರೈತರ ಮಕ್ಕಳ ಬಹುದಿನದ ಬೇಡಿಕೆ ಎಂದರು.


ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಡಿಪ್ಲೋಮಾ ಕಾಲೇಜುಗಳು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಭಾಗದ ರೈತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸುಮಾರು 350 ಎಕರೆಯಷ್ಟು ಜಮೀನಿದ್ದು, ಕೃಷಿ ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳು ಚಾಲ್ತಿಯಲ್ಲಿದೆ ಎಂದರು.


ಕರಾವಳಿಯ ಮೂರು ಜಿಲ್ಲೆಗಳಾದ ದ.ಕ, ಉಡುಪಿ, ಉ.ಕ ಜಿಲ್ಲೆಗಳಲ್ಲಿ ಯಾವುದೇ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಇಲ್ಲ. ಈ ಭಾಗದ ವಿದ್ಯಾರ್ಥಿಗಳು ಹಾಗೂ ರೈತರ ಮಕ್ಕಳಿಗೆ ಕೃಷಿ ವಿಜ್ಞಾನದಲ್ಲಿ ಪದವಿ ವ್ಯಾಸಂಗ ಮಾಡಿ, ಪದವಿ ಪಡೆಯಲು ಹಿನ್ನಡೆಯಾಗುತ್ತಿದೆ ಎಂದರು.


ಬ್ರಹ್ಮಾವರದಲ್ಲಿರುವ ಡಿಪ್ಲೊಮಾ ಕಾಲೇಜಿನಲ್ಲಿ ಸುಸಜ್ಜಿತ ಕಾಲೇಜು ಕಟ್ಟಡ, ಪ್ರಯೋಗ ಶಾಲೆ, ವಿದ್ಯಾರ್ಥಿ ನಿಲಯ ಸೌಲಭ್ಯ, ಪೀಠೋಪಕರಣ ಇತರ ಮೂಲಭೂತ ಸೌಕರ್ಯ, ಬೋಧಕ ಹಾಗು ಬೋಧಕೇತರ ಸಿಬ್ಬಂದಿ ಲಭ್ಯವಿದ್ದು, ಸರ್ಕಾರಕ್ಕೆ ಆರ್ಥಿಕ ಹೊರೆಯಾಗದಂತೆ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಅವಕಾಶವಿದೆ ಎಂದರು.


ಕುಮ್ಕಿ ಹಕ್ಕು ಮತ್ತು ಗೇರು ಲೀಸ್ ಮಂಜೂರಾತಿ ಪತ್ರವನ್ನು ರೈತರಿಗೆ ನೀಡಬೇಕು. ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ಪ್ರಸ್ತುತ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಅನುಷ್ಠಾನಗೊಂಡಿಲ್ಲ. ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳಿಗೆ ರಕ್ಷಣೆ ಒದಗಿಸಲು ಸೋಲಾರ್ ಬೇಲಿ ನಿರ್ಮಿಸಲು ಶೇ.90ರಷ್ಟು ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪ್ರದೀಪ್ ಹೆಬ್ಬಾರ್ ಮತ್ತು ವೈಕುಂಠ ಹೇರ್ಳೆ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article