
ಮಾ.23: ಗಾಂಧಿ ಭಾರತ ಸಮಾವೇಶ
Friday, March 21, 2025
ಲೋಕಬಂಧು ನ್ಯೂಸ್
ಉಡುಪಿ: ಜಿಲ್ಲಾ ಕಾಂಗ್ರೆಸ್ ಹಾಗೂ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಮಾರ್ಚ್ 23ರಂದು ಸಂಜೆ 4 ಗಂಟೆಗೆ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶ ಆಯೋಜಿಸಲಾಗಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾಹಿತಿ ನೀಡಿ, ದೇಶಕ್ಕೆ ಗಾಂಧೀಜಿ ನೀಡಿದ ಕೊಡುಗೆ ಹಾಗೂ ಸಂವಿಧಾನದ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಅಂದು ಅಪರಾಹ್ನ 3.30ರಿಂದ ನಗರದ ನಿತ್ಯಾನಂದ ಮಂದಿರ ಬಳಿಯಿಂದ ಆರಂಭವಾದ ಮೆರವಣಿಗೆ ತ್ರಿವೇಣಿ ವೃತ್ತ ತಿರುವು ಪಡೆದು ಕೋರ್ಟ್ ರಸ್ತೆ ಮೂಲಕ ಮೈದಾನ ತಲುಪಲಿದೆ.
ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲೆಯ ನಾಯಕರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ ಹೆಗ್ಡೆ, ಐವನ್ ಡಿ'ಸೋಜಾ ಮೊದಲಾದವರು ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡ ಪ್ರಶಾಂತ ಜತ್ತನ್ನ ಮೊದಲಾದವರಿದ್ದರು.