-->
ಮಾ.8ರಂದು ರಾಷ್ಟ್ರೀಯ ಲೋಕ ಅದಾಲತ್

ಮಾ.8ರಂದು ರಾಷ್ಟ್ರೀಯ ಲೋಕ ಅದಾಲತ್

ಲೋಕಬಂಧು ನ್ಯೂಸ್
ಉಡುಪಿ: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 8ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಇದು ಈ ವರ್ಷದ ಮೊದಲ ಲೋಕ ಅದಾಲತ್ ಆಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ತಿಳಿಸಿದರು.ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶ.


ಈ ವರ್ಷದ ಲೋಕ ಅದಾಲತ್'ನಲ್ಲಿ 3,442 ಸಿವಿಲ್ ಪ್ರಕರಣಗಳಿದ್ದು, ಅದರಲ್ಲಿ 1,200 ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಇದೆ. ವ್ಯಾಜ್ಯಪೂರ್ವ 3,300 ಪ್ರಕರಣಗಳಿವೆ ಎಂದರು.


ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರ್/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯಗಳ ಪ್ರಕರಣಗಳು (ವಿಚ್ಛೇದನ ಹೊರತುಪಡಿಸಿ), ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.


ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಿಕೊಳ್ಳಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದ ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.


ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶ ಎಂದರು.


2024ರಲ್ಲಿ ನಡೆದ 4 ಲೋಕ ಅದಾಲತ್'ನಲ್ಲಿ 12,966 ವಾಜ್ಯಗಳು ಹಾಗೂ 1,92,976 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿದೆ ಎಂದು ನ್ಯಾ.ಗಂಗಣ್ಣವರ್ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಇದ್ದರು.

Ads on article

Advertise in articles 1

advertising articles 2

Advertise under the article