
ಮಕ್ಕಳ ಹಕ್ಕು ಮತ್ತು ಕರ್ತವ್ಯದ ರಕ್ಷಣೆ ಎಲ್ಲರ ಹೊಣೆ
Friday, March 14, 2025
ಲೋಕಬಂಧು ನ್ಯೂಸ್
ಉಡುಪಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಅವರ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಿಸುವುದು ಪೋಷಕರು, ಅಧಿಕಾರಿಗಳು ಸೇರಿದಂತೆ ನಾಗರಿಕ ಸಮಾಜದ ಜವಾಬ್ದಾರಿ. ಅದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣವರ್ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಸಹಯೋಗದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ (ಪಿಎಸ್ಐ) ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಜೀವನದಲ್ಲಿ ಪ್ರಾಮಾಣಿಕತೆ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ. ನಾವು ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ಕುಟುಂಬದ ಪೋಷಕರ ಭಿನ್ನಾಭಿಪ್ರಾಯಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರೊಂದಿಗೆ ಅವರಲ್ಲಿ ಅಸುರಕ್ಷಿತ ಭಾವನೆ ಉಂಟುಮಾಡುತ್ತದೆ. ಇದು ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಇರುವ ಕಾನೂನುಗಳನ್ನು ಉಲ್ಲಂಘಿಸಲು ಪ್ರೇರೇಪಿಸುತ್ತದೆ. ಹಿರಿಯರು ಹಾಗಾಗದಂತೆ ಎಚ್ಚರ ವಹಿಸಬೇಕು ಎಂದರು.
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಕಾಯಿದೆಗಳಲ್ಲಿ ಅಡಕವಾಗಿರುವ ವ್ಯಕ್ತಿ ಹಾಗೂ ವ್ಯಕ್ತಿತ್ವಗಳು ನಮ್ಮವರೇ ಆಗಿರುತ್ತಾರೆ. ಕೆಟ್ಟ ಕೆಲಸ ಮಾಡಿದವರ ವಿರುದ್ಧ ಸಾಕ್ಷ್ಯಾಧಾರ ಸಂಗ್ರಹಿಸುವ ಸಂದರ್ಭದಲ್ಲಿ ಮನಸ್ಸು ಮತ್ತು ವಿವೇಕದಿಂದ ನಿರ್ವಹಿಸಿದಾಗ ಯಶಸ್ಸು ನಮ್ಮದಾಗುತ್ತದೆ. ಅಂಥ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಅಂತರಾತ್ಮ ಹಾಗು ಅಂತರ್ಚಕ್ಷುವಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರತೀ ತಿಂಗಳು ನಿರಂತರವಾಗಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಇಂಥ ಕಾರ್ಯಾಗಾರಗಳು ಜ್ಞಾನವನ್ನು ಹೆಚ್ಚಿಸುವುದರೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ.
ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ಬಗೆಗಿನ ಪ್ರಕರಣಗಳಲ್ಲಿ ಸೂಕ್ಷ್ಮವಾಗಿ ಯೋಚಿಸಿ, ವಿವೇಚನೆಯಿಂದ ಕಾನೂನಿನಡಿ ನಿರ್ವಹಿಸಬೇಕು. ಹೀಗಾದಾಗ ಮಾತ್ರ ನೊಂದವರಿಗೆ ನ್ಯಾಯ ಸಿಗಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಮಕ್ಕಳ ಸುತ್ತಮುತ್ತಲಿನ ಪರಿಸರ ಅವರ ಮೇಲೆ ಒತ್ತಡ ಹೇರುವುದರೊಂದಿಗೆ ತಪ್ಪು ಮಾಡಲು ಅನುವು ಮಾಡಿಕೊಡುತ್ತದೆ. ಈ ಸಂದರ್ಭದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳನ್ನು ಅನುಷ್ಠಾನಗೊಳಿಸುವಾಗ ಮಕ್ಕಳನ್ನು ಅಪರಾಧಿಗಳಂತೆ ನೋಡದೆ ಅವರೊಂದಿಗೆ ಸೂಕ್ಷ್ಮವಾಗಿ ವರ್ತಿಸಿ, ಘಟನೆಗೆ ಕಾರಣ ತಿಳಿಯುವುದರೊಂದಿಗೆ ಅವರು ತಪ್ಪು ತಿದ್ದಿಕೊಂಡು ಸುಧಾರಣೆ ಹೊಂದಲು ದಾರಿ ಮಾಡಿಕೊಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೊಣಿಲ್ ರಾಘವೇಂದ್ರ ಭಟ್, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ವಾಸ್ತವಿಕ ನೆಲೆಯಲ್ಲಿ ಎದುರಿಸುವ ಕುರಿತು ಮಾಹಿತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್., ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲ ನ್ಯಾಯ ಮಂಡಳಿ ಜಿಲ್ಲಾ ಅಧ್ಯಕ್ಷ ಮನು ಪಟೇಲ್, ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ಪಿ.ಎ. ಹೆಗಡೆ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ವಿವಿಧ ಠಾಣೆಗಳ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮೊದಲಾದವರಿದ್ದರು.
ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ. ಸ್ವಾಗತಿಸಿದರು. ಆರಕ್ಷಕ ಯೋಗೀಶ್ ನಿರೂಪಿಸಿ, ವಂದಿಸಿದರು.