ಉಪ ಲೋಕಾಯುಕ್ತರಿಂದ ದಿಢೀರ್ ದಾಳಿ
Saturday, March 8, 2025
ಲೋಕಬಂಧು ನ್ಯೂಸ್
ಉಡುಪಿ: ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಶನಿವಾರ ಬೆಳ್ಳಂಬೆಳಗ್ಗೆ ಉಡುಪಿಯ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಅಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರಕರಣ ದಾಖಲಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.ಮೊದಲಿಗೆ ಇತ್ತೀಚೆಗೆ ಬೆಂಕಿ ದುರಂತ ಸಂಭವಿಸಿದ ಬ್ರಹ್ಮಾವರ ವಾರಂಬಳ್ಳಿ ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಅಲ್ಲಿ ಸುಟ್ಟುಹೋದ ವಸ್ತುಗಳನ್ನು ಇನ್ನೂ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ಸಂಬಂಧ ಪ್ರಕರಣ ದಾಖಲಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದರು.
ಬಳಿಕ ಆದಿವುಡುಪಿ ಎಪಿಎಂಸಿಗೆ ದಾಳಿ ನಡೆಸಿದ ಉಪ ಲೋಕಾಯುಕ್ತರು ಅಲ್ಲಿನ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳನ್ನು ಪರಿಶೀಲಿಸಿದರು. ನೀರಿನ ವ್ಯವಸ್ಥೆ ಇಲ್ಲದಿರುವ ಹಾಗೂ ಶೌಚಾಲಯದಲ್ಲಿ ನೈರ್ಮಲ್ಯ ಕಾಪಾಡದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಆ ಸಂಬಂಧ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದರು.
ಬಳಿಕ ಕಾಪು ಪುರಸಭೆ ಡಂಪಿಂಗ್ ಯಾರ್ಡ್'ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸ್ಥಳದಲ್ಲಿ ಇರದ ಬಗ್ಗೆ ಉಪ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿಗಳಾದ ಡಾ. ಗಾನಾ ಪಿ. ಕುಮಾರ್, ಮಂಜುನಾಥ್ ಹಾಗೂ ಸಿಬ್ಬಂದಿ ಇದ್ದರು.