.jpg)
ಶಿಕ್ಷಣದಿಂದ ಬದಲಾವಣೆ ಸಾಧ್ಯ
Tuesday, May 27, 2025
ಲೋಕಬಂಧು ನ್ಯೂಸ್, ಉಡುಪಿ
ಸಮಾಜದಲ್ಲಿ ಉತ್ತಮ ಸ್ಥಾನ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕಿದ್ದು, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ನೀಡುವ ಕಾರ್ಯ ಶಿಕ್ಷಕರ ಮೇಲಿದೆ. ಅದನ್ನು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು.
2022-23 ಮತ್ತು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ನಗರದ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ ಹಾಗೂ ಆರೋಗ್ಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರು ತಮ್ಮ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆತಿದೆ.
ವಿದ್ಯಾರ್ಥಿಗಳು ಇಂಜಿನಿಯರಿಂಗ್, ವೈದ್ಯ ವೃತ್ತಿಗಳ ಕಡೆಗೆ ಮಾತ್ರ ಗಮನಹರಿಸುತ್ತಿದ್ದಾರೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನೂ ಎದುರಿಸಿ, ಐ.ಎ.ಎಸ್, ಐ.ಪಿ.ಎಸ್.ನಂಥ ಉತ್ತಮ ಹುದ್ದೆ ಪಡೆದುಕೊಂಡು ಜಿಲ್ಲೆ, ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಪ್ರೌಢಶಾಲೆಗಳು ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿದೆ. ಕೆಲವು ಶಾಲೆಗಳಿಗೆ ಸಂಜೆಯ ವೇಳೆಯಲ್ಲಿ ಅನಿರೀಕ್ಷತ ಭೆಟಿ ನೀಡಿದಾಗಲೂ ಸಹ ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನ ಮಾಡುವುದನ್ನು ಗಮನಿಸಿದ್ದು, ಜಿಲ್ಲೆಯ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಇಂಥ ವಿಶೇಷ ತರಗತಿಗಳು ಸಹಕಾರಿಯಾಗಿವೆ.
ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಶಿಕ್ಷಕರು ಹಲವಾರು ಆಯಾಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಫಲಿತಾಂಶ ಸುಧಾರಣೆಗೆ ಶ್ರಮ ವಹಿಸಿದ್ದಾರೆ. ಮುಂದಿನ ವರ್ಷ ನಮ್ಮ ಗುರಿ ಏನು ಎಂಬುದನ್ನು ಈಗಿನಿಂದಲೇ ರೂಢಿಸಿಕೊಳ್ಳಬೇಕು. ಪ್ರಾರಂಭಿಕ ಹಂತದಿಂದಲೇ ಮಕ್ಕಳು ನಿಗದಿತ ಗುರಿ ಸಾಧನೆಯಲ್ಲಿ ತೊಡಗಿಕೊಳ್ಳುವಂತೆ ನೋಡಿಕೊಳ್ಳಬೇಕು. ಪ್ರಸ್ತಕ್ತ ಸಾಲಿನಲ್ಲಿ ಪಡೆದ ಸ್ಥಾನವನ್ನು ಉಳಿಸಿಕೊಳ್ಳುವುದರೊಂದಿಗೆ ಅದನ್ನು ಮತ್ತಷ್ಟು ಹೆಚ್ಚಿಸುವುದು ಶಿಕ್ಷಕರ ಜವಾಬ್ದಾರಿ ಎಂದರು.
ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಸ್ವಸ್ತಿ ಕಾಮತ್, ನಿಧಿ ಪೈ ಹಾಗೂ ಸಾಯಿಸ್ಪರ್ಶ ಅವರನ್ನು ಸನ್ಮಾನಿಸಲಾಯಿತು.
2022-23 ಮತ್ತು 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಜಿಲ್ಲೆಯ 147 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳಿಗೆ ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಬ್ರಹ್ಮಾವರ ತಾಲೂಕು ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಈ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಗಣಪತಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಶಿಕ್ಷಕರ ಸಂಘದ ಪ್ರತಿನಿಧಿ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಸೈಂಟ್ ಸಿಸಿಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರೀತಿ ಸಿಸ್ಟರ್, ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ. ಗಣಪತಿ ಸ್ವಾಗತಿಸಿ, ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ನಿರೂಪಿಸಿದರು. ವಿಷಯ ಪರಿವೀಕ್ಷಕ ನಾಗರಾಜ ಮೈರ್ಕೊಮೆ ವಂದಿಸಿದರು.