
ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ
Tuesday, May 13, 2025
ಲೋಕಬಂಧು ನ್ಯೂಸ್
ಉಡುಪಿ: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಜನರಿಗೆ ನಳ್ಳಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಕೆಲವೊಂದು ಭಾಗಗಳಲ್ಲಿ ಕಾಮಗಾರಿ ಕೈಗೊಳ್ಳಲು ಅರಣ್ಯ ಭೂಮಿಯಲ್ಲಿ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಒಪ್ಪಿಗೆಯನ್ನು ಶೀಘ್ರದಲ್ಲಿಯೇ ಪಡೆದು ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅರಣ್ಯ ಇಲಾಖೆಯವರೂ ಸ್ಪಂದಿಸಬೇಕು. ಕಾಮಗಾರಿಗಳಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದರು.
ಜಿಲ್ಲೆಯ ಕಾಡಂಚಿನಲ್ಲಿ ವಾಸವಿರುವ ಕೊರಗ ಸಮುದಾಯದವರ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಸರ್ಕಾರದ ಯಾವುದೇ ಯೋಜನೆ ಪಡೆಯಲು ಅವರು ಅರ್ಜಿ ಸಲ್ಲಿಸಲು ಮುಂದೆ ಬರುವುದಿಲ್ಲ. ಜಿಲ್ಲೆಯಲ್ಲಿ 182ಕ್ಕೂ ಹೆಚ್ಚು ಹಾಡಿಗಳಲ್ಲಿ ಈ ಸಮುದಾಯದವರು ವಾಸವಿದ್ದಾರೆ. ಅವರು ಇರುವಲ್ಲಿಗೇ ಹೋಗಿ ಅವರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಆಯುಷ್ಮಾನ್ ಕಾರ್ಡ್ ನೀಡುವುದರೊಂದಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಮುಂದಾಗಬೇಕು. ವಸತಿ ಕಾರ್ಯಕ್ರಮದಡಿ ಅವರಿಗೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿ ಪ್ರಗತಿ ಹೆಚ್ಚಿಸಬೇಕು ಎಂದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ 1,412 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈಗಾಗಲೇ ಅವಶ್ಯವಿರುವೆಡೆ ಭೂಸ್ವಾಧೀನ ಪ್ರಕ್ರಿಯೆ ಮುಗಿಸಿ, ಪರಿಹಾರ ಹಣವನ್ನು ಸಂತ್ರಸ್ತರಿಗೆ ತ್ವರಿತವಾಗಿ ಪಾವತಿಸಿ, ಕಾಮಗಾರಿಯ ವೇಗ ಹೆಚ್ಚಿಸಬೇಕು.
ಹೆಜಮಾಡಿ ಬಂದರು ಕಾಮಗಾರಿಯ ವೇಗ ವರ್ಧನೆ, ಹಂಗಾರಕಟ್ಟೆ, ಗಂಗೊಳ್ಳಿ ಹಾಗೂ ಮರವಂತೆಯಲ್ಲಿ ಕೋಸ್ಟಲ್ ಬರ್ತ್ ಅಭಿವೃದ್ಧಿ ಕಾಮಗಾರಿ ಹಾಗೂ ಹೊರ ಬಂದರು ವಿಸ್ತರಣಾ ಯೋಜನೆಗಳ ಕಾಮಗಾರಿಗಳನ್ನು ಚುರುಕುಗೊಳಿಸಬೇಕು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಲುಸಂಕ ನಿರ್ಮಿಸಲು ಅವಕಾಶವಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ಕಾರ್ಯ ಆದ್ಯತೆಯಲ್ಲಿ ಆಗಬೇಕು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ತ್ವರಿತ ಗತಿಯಲ್ಲಿ ಆಗಬೇಕು ಎಂದರು.
ಗ್ರಾಮ ಸಡಕ್ ಯೋಜನೆಯಡಿ ಕೈಗೊಂಡಿರುವ ಕಾಂಕ್ರಿಟ್ ರಸ್ತೆಗಳು ಹಾಳಾಗಿದ್ದು, ಅವುಗಳ ನಿರ್ವಹಣಾ ಅವಧಿ ಮಿಗಿದಿದೆ. ಸಾಮಾನ್ಯವಾಗಿ ಕಾಂಕ್ರಿಟ್ ರಸ್ತೆಗಳು 15 ವರ್ಷ ಬಾಳಿಕೆ ಬರಬೇಕು. ಆದರೆ, ಆರೇಳು ವರ್ಷದಲ್ಲಿಯೇ ರಸ್ತೆ ಹಾಳಾಗಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಅವುಗಳನ್ನು ಸರಿಪಡಿಸಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಯಶಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.