ವೃದ್ಧರು, ರೋಗಿಗಳಿಗೆ ಮಾಸ್ಕ್ ಕಡ್ಡಾಯ
Tuesday, May 27, 2025
ಲೋಕಬಂಧು ನ್ಯೂಸ್, ಬೆಂಗಳೂರು
ವೃದ್ಧರು, ಕಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯಲ್ಲಿ ಮುನ್ನೆಚ್ಚರಿಕೆ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಸುಮಾರು 65 ಇದ್ದ ಪ್ರಕರಣ 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಇರುವ ಮಕ್ಕಳನ್ನು ಶಾಲೆಗೆ ಕಳಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.