ಕದನ ಪರಿಸ್ಥಿತಿ: ಬಿಗು ಭದ್ರತೆ
Monday, May 12, 2025
ಲೋಕಬಂಧು ನ್ಯೂಸ್
ಉಡುಪಿ: ದೇಶದಲ್ಲಿ ಕದನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಾಪಾಡಲು ಸೂಚಿಸಲಾಗಿದೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ದಾಸ್ತಾನು ಹಾಗೂ ಕಳ್ಳಸಂತೆ ಮೇಲೆ ನಿಗಾ ವಹಿಸಲಾಗಿದೆ. ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನ ತಡೆಯಲು ಎಚ್ಚರಿಕೆ ವಹಿಸಲಾಗುವುದು. ಸುರಕ್ಷತೆ ಕುರಿತಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಪಾಕ್ ವಿರುದ್ಧ ಯುದ್ಧ ಸನ್ನದ್ಧ ಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗ್ನಿಶಾಮಕ ದಳದ ಕೇಂದ್ರಗಳು 24 ಗಂಟೆಗಳು ಸನ್ನದ್ಧ ಸ್ಥಿತಿಯಲ್ಲಿವೆ.
ಪೌರ ರಕ್ಷಣಾ ವ್ಯವಸ್ಥೆ ಬಲಪಡಿಸಲು 400ಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಗುರುತಿಸಲಾಗಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಸ್ವಯಂ ಸೇವಕರಿಗೆ ತರಬೇತಿ ನೀಡಿ, ಅಗತ್ಯವಿದ್ದಲ್ಲಿ ತುರ್ತು ಸಂದರ್ಭಗಳಲ್ಲಿ ಅವರನ್ನು ನಿಯೋಜಿಸಲಾಗುವುದು.
ಕರಾವಳಿ ಕಾವಲು ಪಡೆಯ ಭದ್ರತೆ ಬಿಗಿಗೊಳಿಸಲಾಗಿದೆ ಎಂದರು.
ಜಿಲ್ಲೆಯ ಆಸ್ಪತ್ರೆಗಳಲ್ಲಿ ಬೆಡ್ ಗಳು, ಔಷಧಿಗಳು ಸಾಕಷ್ಟು ದಾಸ್ತಾನು ಇರುವಂತೆ ಹಾಗೂ ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಯಾವುದೇ ಅನಾಹುತ ಅಥವಾ ತೊಂದರೆಗಳಾದ್ದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ನಂಬರ್ ಗೆ ಮಾಹಿತಿ ನೀಡಬೇಕು.
ಜಿಲ್ಲೆಯಲ್ಲಿ ಡ್ರೋನ್ ಗಳ ಬಳಕೆ ಮಾಡುವಂತಿಲ್ಲ. ಜಿಲ್ಲಾಡಳಿತದ ಮಾಹಿತಿ ಹೊರತುಹೊರತುಪಡಿಸಿ ಬೇರೆಡೆಗಳಿಂದ ಬರುವ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣ ಮತ್ತಿತರ ಕಡೆ ಹಂಚಿಕೊಳ್ಳುವಂತಿಲ್ಲ ಎಂದರು.