ಸುಶಿಕ್ಷಿತ ಯುವ ಪೀಳಿಗೆ ದೇಶದ ಆಸ್ತಿ
Saturday, May 31, 2025
ಲೋಕಬಂಧು ನ್ಯೂಸ್, ಉಡುಪಿ
2025- 26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆಯ ವಳಕಾಡು ವಾರ್ಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಗೆ ಶಾಸಕ ಯಶ್ ಪಾಲ್ ಸುವರ್ಣ ಶನಿವಾರ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ಆತ್ಮೀಯವಾಗಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಭವಿಷ್ಯ ರೂಪಿಸಲಿರುವ ಯುವ ಪೀಳಿಗೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ದೇಶಕ್ಕೆ ಆಸ್ತಿಯನ್ನಾಗಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ನಿರಂತರ ಶ್ರಮಿಸುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು.
ಶಾಸಕರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಒದಗಿಸಿದ ಸಿಹಿತಿಂಡಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಶಾಲಾಭಿವೃದ್ಧಿ ಸಮಿತಿ ಪ್ರಮುಖರಾದ ನಾಗಭೂಷಣ ಶೇಟ್, ಡಾ.ಎಂ. ಆರ್. ಹೆಗಡೆ, ಡಾ.ವಿರೂಪಾಕ್ಷ ದೇವರಮನಿ, ಚಂದ್ರಶೇಖರ್ ಮತ್ತು ಗಣೇಶ್ ಹೆಗ್ಡೆ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕುಸುಮ ಮೊದಲಾದವರಿದ್ದರು.