ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11ರ ಹೊಸ ಅಧಿಸೂಚನೆಯಲ್ಲಿ ವಿನಾಯಿತಿ ಅಗತ್ಯ
Thursday, July 10, 2025
ಲೋಕಬಂಧು ನ್ಯೂಸ್, ಉಡುಪಿ
ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11ನ್ನು ಹೊಸ ಅಧಿಸೂಚನೆ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11ನ್ನು ಪಡೆಯಲು ಜನಸಾಮಾನ್ಯರು ಸಂಬಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಪಡೆಯಲು ವಿಳಂಬವಾಗುತ್ತಿದೆ. ತಿಂಗಳುಗಟ್ಟಲೆ ಸುತ್ತಾಡಿದರೂ ಅರ್ಜಿ ವಿಲೇವಾರಿ ಆಗುತ್ತಿಲ್ಲ. ಹೊಸ ಅಧಿಸೂಚನೆ ಪ್ರಕಾರ ಎಲ್ಲಾ ಅರ್ಜಿಗಳಿಗೆ ಅನುಮೋದನೆ ನೀಡಲೂ ಕಷ್ಟಸಾಧ್ಯವಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ರಕರಣ ಎಂದು ಸರಕಾರ ಕೆಲವೊಂದು ವಿನಾಯಿತಿ ನೀಡುವ ಅಗತ್ಯವಿದೆ. ಸರಕಾರದ ಮಟ್ಟದಲ್ಲಿ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಜಿಲ್ಲೆಯ ಜನ ಸಾಮಾನ್ಯರಿಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಮತ್ತಿತರ ದಾಖಲೆಗಳನ್ನು ಪಡೆಯಲು ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ಜಿಲ್ಲೆಯ ಬಾಗೀದಾರರ ಸಭೆ ಕರೆದು ಅವರ ಅಹವಾಲುಗಳನ್ನು ಕೇಳಿ, ಸಮಸ್ಯೆಗಳನ್ನು ಮುಂದಿನ ಐದು ದಿನಗಳೊಳಗಾಗಿ ಕ್ರೋಢೀಕರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜನತೆಗೆ ಆಗುತ್ತಿರುವ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಪ್ರಾಧಿಕಾರ ಹೊಸ ಅಧಿಸೂಚನೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಪಟ್ಟಿ ಮಾಡಿ ಕೊಡಿ. ಅದನ್ನು ಮತ್ತೊಮ್ಮೆ ಎಲ್ಲರೂ ಸೇರಿ ಚರ್ಚಿಸಿ ಬೆಂಗಳೂರಿನಲ್ಲಿ ಕಾರ್ಯದರ್ಶಿ ಮಟ್ಟದಲ್ಲಿ ಸಭೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಜನಪ್ರತಿನಿಧಿಗಳು ಜನಸಾಮಾನ್ಯರ ಸಮಸ್ಯೆ ಬಗೆಹರಿಸಲು ಸಭೆ ಕರೆದಾಗ ಸಭೆಯ ನಡಾವಳಿ ದಾಖಲಿಸಿದಲ್ಲಿ ಮುಂದಿನ ಸಭೆಗಳಲ್ಲಿ ನಡಾವಳಿ ಆಧಾರದ ಮೇಲೆ ಸಭೆ ಮುಂದುವರಿಸಲು ಅನುಕೂಲವಾಗುತ್ತದೆ. ಕಳೆದ ಸಭೆಯ ನಡಾವಳಿಯನ್ನು ದಾಖಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗ್ರಾಮ ಠಾಣೆಗಳು ಇಲ್ಲದಿರುವುದರಿಂದ ಸಮಸ್ಯೆಗಳು ಉದ್ಭವವಾಗುತ್ತಿವೆ. ಲೋಕೋಪಯೋಗಿ ಇಲಾಖೆ ರಸ್ತೆ ಅಂಚಿನಿಂದ ಗೃಹ ನಿರ್ಮಾಣಕ್ಕೆ 6 ಮೀ. ಬಿಟ್ಟು ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು ಎಂದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಗರ ಯೋಜನಾ ಪ್ರಾಧಿಕಾರದಲ್ಲಿ ನಮ್ಮ ಕೆಲಸಗಳು ಆಗುವುದಿಲ್ಲ ಎಂದು ಜನರ ಮನಸ್ಸಿನಲ್ಲಿದೆ. ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಕಂಡುಬರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರ ಮತ್ತು ಗ್ರಾಮಾಂತರ ಇಲಾಖೆಯ ಸಹಾಯಕ ನಿರ್ದೇಶಕಿ ರಮ್ಯಾ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.