-->
Udupi: ನೆಮ್ಮದಿಯ ಬದುಕಿಗೆ ಪಂಚ ಗ್ಯಾರಂಟಿ ಆಸರೆ

Udupi: ನೆಮ್ಮದಿಯ ಬದುಕಿಗೆ ಪಂಚ ಗ್ಯಾರಂಟಿ ಆಸರೆ

ಲೋಕಬಂಧು ನ್ಯೂಸ್, ಉಡುಪಿ
ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂ ಅವುಗಳನ್ನು ತಲುಪಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ ಕಳೆದ ಎರಡು ವರ್ಷಗಳ ಹಿಂದೆ ಜಾರಿಗೆ ತರುವುದರೊಂದಿಗೆ ನಿರಂತರವಾಗಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತಿದೆ. ಈ ಬಾರಿಯ ಬಜೆಟ್'ನಲ್ಲಿ 51,034 ಕೋಟಿ ರೂ. ಮೊತ್ತದ ಅನುದಾನ ಮೀಸಲಿಡಲಾಗಿದೆ. ಈ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವಂತೆ ಪ್ರತಿಯೊಂದು ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದರು.


ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳ ಕುರಿತು ದೂರುಗಳು ಬಂದಲ್ಲಿ ಆದ್ಯತೆಯ ಮೇರೆಗೆ ಅಧಿಕಾರಿಗಳು ಸ್ಪಂದಿಸಬೇಕು. ಗೃಹಲಕ್ಷ್ಮೀ ಯೋಜನೆಯಡಿ ಕೆಲವು ಫಲಾನುಭವಿಗಳಿಗೆ ಪ್ರತೀ ತಿಂಗಳು 2 ಸಾವಿರ ರೂ. ಹಣ ಬರುತ್ತಿದ್ದು, ನಡುವೆ ಒಂದೆರೆಡು ತಿಂಗಳ ಹಣ ಬಂದಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಅವುಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂದಿಸಬೇಕು ಎಂದರು.


ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾಗದ್ದ ಕೆಎಸ್.ಆರ್.ಟಿಸಿ ಬಸ್ ಸೌಲಭ್ಯ ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದು ಅದರಿಂದ ಶಾಲಾ ಕಾಲೇಜುಗಳ ವಿದ್ಯಾರ್ಥಿಳಿಗೆ ಹಾಗೂ ಜನತೆಗೆ ತೊಂದರೆ ಉಂಟಾಗಿದೆ. ಆದಷ್ಟು ಶೀಘ್ರದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಮರುಚಾಲನೆಗೊಳಿಸುವಂತೆ ಸಲಹೆ ನೀಡಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆ ಮಹಿಳಾ ಸಬಲೀಕರಣದಲ್ಲಿ ಮುಂಚೂಣಿಯಲ್ಲಿದೆ. ಪಂಚ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿಮಾಡಿಕೊಡುವ ಉದ್ದೇಶ ಹೊಂದಿದ್ದು,  ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸೇರಿಕೊಂಡು ಸ್ವ-ಸಹಾಯ ಗುಂಪು ರಚಿಸುವುದರೊಂದಿಗೆ ಸರಕಾರದ ವಿವಿಧ ಯೋಜನೆಗಳ ಸಹಕಾರದೊಂದಿಗೆ ಹೈನುಗಾರಿಕೆ, ಕುಕ್ಕುಟೋದ್ಯಮ ಮತ್ತಿತರ ಸ್ವ-ಉದ್ಯೋಗ ಹೊಂದಲು ಹಾಗೂ ಸಣ್ಣಪುಟ್ಟ ಸಿವಿಲ್ ವರ್ಕ್'ಗಳನ್ನು ನಿರ್ವಹಿಸಲು ಮುಂದೆಬರಬೇಕು ಎಂದರು.


ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರ್ಲಾಡಿ ಗ್ರಾಮ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸುಮಾರು 250ಕ್ಕೂ ಹೆಚ್ಚು ಮನೆಗಳಿದ್ದು, ನ್ಯಾಯಬೆಲೆ ಅಂಗಡಿ ಇಲ್ಲದೆ ಪಡಿತರ ಪಡೆಯಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಬ್ರಹ್ಮಾವರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಸಭೆಯ ಗಮನಕ್ಕೆ ತಂದರು. ಅದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು, ಇಂಥ ಪ್ರದೇಶ ವ್ಯಾಪ್ತಿಯಲ್ಲಿ ಪಡಿತರ ಸಂಖ್ಯೆಯನ್ನು ಆಧರಿಸಿ ನಿಯಮಾನುಸಾರ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.


ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಗೀತಾ ವಾಗ್ಳೆ, ಸಂತೋಷ್ ಕುಲಾಲ್ ಹಾಗೂ ಸತೀಶ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್, ಡಾ.ಸುನೀತಾ ಶೆಟ್ಟಿ, ನವೀನಚಂದ್ರ ಅಡ್ವೆ, ಹರಿಪ್ರಸಾದ್ ಶೆಟ್ಟಿ, ಅಜಿತ್ ಹೆಗ್ಡೆ, ಶಂಕರ್ ಶೇರಿಗಾರ್ ಹಾಗೂ ಮೋಹನ್ ಪೂಜಾರಿ ಉಪ್ಪುಂದ ಮೊದಲಾದದವರಿದ್ದರು.

Ads on article

Advertise in articles 1

advertising articles 2

Advertise under the article