
ಮಹಿಳೆಯ ಕೈ ಬಲಗೊಂಡಲ್ಲಿ ಮುಂದಿನ ಪೀಳಿಗೆ ಸದೃಢ
Friday, July 4, 2025
ಲೋಕಬಂಧು ನ್ಯೂಸ್, ಉಡುಪಿ
ಮುಂಬರುವ ಪೀಳಿಗೆಗೆ ಒಳ್ಳೆಯದಾಗಬೇಕಾದರೆ ದೇಶದ ಮಹಿಳೆಯರ ಕೈ ಬಲಪಡಿಸಬೇಕಾದ ಅಗತ್ಯವಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಆ ಕೆಲಸ ಮಾಡುತ್ತಿವೆ ಎಂದು ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬನ್ನಂಜೆ ನಾರಾಯಣ ಗುರು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಮನೆ ಮನೆಗೆ ತೆರಳಿ ಜನತೆಗೆ ತಿಳಿಸುವ ಕೆಲಸ ಮಾಡಬೇಕು ಎಂದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷಗಳ ಆಡಳಿತ ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡಿದೆ. ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಘೋಷಿಸಿದ್ದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ರಾಜಕೀಯ ಮುಖಂಡರನ್ನು ಜೈಲಿಗಷ್ಟೇ ಹಾಕಲಾಗಿತ್ತು. ಅವರ ಮನೆಗೆ ಇ.ಡಿ., ಐ.ಟಿ ದಾಳಿ ನಡೆಸಿರಲಿಲ್ಲ. ಇಂದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖರಾದ ಎಂ.ಎ. ಗಫೂರ್, ಲಾವಣ್ಯ ಬಲ್ಲಾಳ್, ಗೀತಾ ವಾಗ್ಲೆ, ಮಮತಾ ಗಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರಾಜು ಪೂಜಾರಿವಭಾಗವಹಿಸಿದ್ದರು.