.jpg)
Udupi: ಕಾಲೇಜುಗಳಲ್ಲಿ ಮಾದಕ ವಿರೋಧಿ ಸಮಿತಿ ರಚಿಸಿ
Thursday, July 24, 2025
ಲೋಕಬಂಧು ನ್ಯೂಸ್, ಉಡುಪಿ
ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವಸ್ತುಗಳ ಸೇವನೆ ಚಟಕ್ಕೆ ಯಾಕೆ ಒಳಗಾಗುತ್ತಿದ್ದಾರೆ ಎಂಬುದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಪಿಯುಸಿ ಹಾಗೂ ಅದಕ್ಕಿಂತ ಮೇಲಿನ ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಸಮಿತಿ ರಚಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಸಮಿತಿ ರಚಿಸುವ ಸಲುವಾಗಿ ನಗರದ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ `ನಶೆಯಿಂದ ಉಷೆಯೆಡೆಗೆ' ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜುಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪಿಐ ಅಥವಾ ಎಸ್ಐ ಸಮಿತಿಗೆ ನೋಡಲ್ ಅಧಿಕಾರಿಯಾಗಿರುತ್ತಾರೆ. ಪ್ರತೀ ತಿಂಗಳು ಈ ಸಮಿತಿಯ ಸಭೆ ನಡೆಸಬೇಕು ಮತ್ತು ಆ ಸಭೆಗೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಕರೆಸಬೇಕು ಎಂದವರು ಸಲಹೆ ನೀಡಿದರು.
`ಮಾದಕ ವಸ್ತು ವಿಷಯಕ್ಕೆ ಸಂಬಂಧಿಸಿ ಕಾಲೇಜುಗಳಿಂದ ನೀಡುವ ಮಾಹಿತಿಯನ್ನು ಗೋಪ್ಯವಾಗಿಡಲಾಗುವುದು. ಕಾಲೇಜು ಮತ್ತು ವಿದ್ಯಾರ್ಥಿಗಳ ಹೆಸರನ್ನೂ ಬಹಿರಂಗಪಡಿಸುವುದಿಲ್ಲ ಎಂದೂ ತಿಳಿಸಿದರು.
ಪಿಯುಸಿ ಮತ್ತು ಅದಕ್ಕಿಂತ ಮೇಲಿನ ಕಾಲೇಜುಗಳಲ್ಲಿ ಈ ಸಮಿತಿ ವಿದ್ಯಾರ್ಥಿಗಳಿಂದ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು ಮತ್ತು ಪ್ರತೀ ಮೂರು ತಿಂಗಳಿಗೊಮ್ಮೆ ಶೇ.10ರಷ್ಟು ವಿದ್ಯಾರ್ಥಿಗಳನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.
ಮಾದಕ ವಸ್ತು ಸಾಗಾಟ, ಸೇವನೆ ಪ್ರಕರಣಗಳಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದ್ದರೆ, ಉಡುಪಿ ಜಿಲ್ಲೆ ಮೂರನೇ ಸ್ಥಾನದಲ್ಲಿದೆ ಎಂದು ಎಸ್ಪಿ ಹರಿರಾಂ ಶಂಕರ್ ಹೇಳಿದರು.
ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹರ್ಷಾ ಪ್ರಿಯಂವದ, ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಪಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿ.ಟಿ. ಇದ್ದರು.
ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಸ್ವಾಗತಿಸಿ. ಡಿಎಆರ್ ಸಿಬ್ಬಂದಿ ಯೋಗೀಶ್ ನಿರೂಪಿಸಿದರು.