
Udupi: ಪ್ರಧಾನಮಂತ್ರಿ ಸೂರ್ಯ ಘರ್: ಜಿಲ್ಲೆಗೆ 6.2 ಕೋಟಿ ಬಿಡುಗಡೆ
Friday, August 29, 2025
ಲೋಕಬಂಧು ನ್ಯೂಸ್, ಉಡುಪಿ
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಜಿಲ್ಲೆಯ 773 ಮಂದಿ ಫಲಾನುಭವಿಗಳ ಖಾತೆಗೆ 6.2 ಕೋ. ರೂ. ಜಮೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶುಕ್ರವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಗ್ರಾಮ ಪಂಚಾಯತ್'ಗಳಲ್ಲಿ ಸೂರ್ಯ ಘರ್ ಯೋಜನೆ ಅನುಷ್ಠಾನ ಪರಿಶೀಲಿಸಿದ ಸಂಸದ ಕೋಟ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್'ಗಳು ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಈ ಯೋಜನೆಯ ಪ್ರಯೋಜನಗಳನ್ನು ಮನೆ ಮನೆಗೆ ತಲುಪಿಸಬೇಕೆಂದು ಮನವಿ ಮಾಡಿದರು.
ಈಗಾಗಲೇ ಜಿಲ್ಲೆಯಲ್ಲಿ ಸೂರ್ಯ ಘರ್ ಯೋಜನೆಗೆ 5,270 ಅರ್ಜಿ ಬಂದಿದ್ದು, 1,155 ಮನೆಗಳಿಗೆ ವೆಂಡರ್ ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ 803 ಮನೆಗಳಿಗೆ ಸೋಲಾರ್ ಅಳವಡಿಸಲಾಗಿದ್ದು, ಅಳವಡಿಕೆ ಮಾಡಲಾದ 773 ಫಲಾನುಭವಿಗಳಿಗೆ ಒಟ್ಟು 6.2 ಕೋ. ಹಣ ಬಿಡುಗಡೆ ಮಾಡಲಾಗಿದೆ. ಪ್ರತೀ ಫಲಾನುಭವಿಗೆ 78 ಸಾವಿರ ರೂ. ಸಬ್ಸಿಡಿ ಸಿಗಲಿದೆ ಎಂದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ದಿನೇಶ್ ಉಪಾಧ್ಯಾಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರಾದ ನಿತಿನ್ ಸಾಲಿಯಾನ್ ಹಾಗೂ ಕೋಟತಟ್ಟು, ಉಪ್ಪೂರು, ನಿಟ್ಟೆ, ಕಿರಿಮಂಜೇಶ್ವರ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರು.