ಮಂಗಳೂರು ದಸರಾಕ್ಕೆ ಚಾಲನೆ
Tuesday, September 23, 2025
ಲೋಕಬಂಧು ನ್ಯೂಸ್, ಮಂಗಳೂರು
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಸೋಮವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕ್ಷೇತ್ರದಲ್ಲಿ ಶಾರದಾ ಮಾತೆ, ಮಹಾಗಣಪತಿ ಮತ್ತು ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ವೈಭವದಿಂದ ನಡೆಯಿತು.ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಮಂಗಳೂರು ರಾಮಕೃಷ್ಣ ಮಿಷನ್ ಅಧ್ಯಕ್ಷ ಶ್ರೀ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಚಾಲನೆ ನೀಡಿದರು.
ಭವ್ಯ ಕಲಾಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಸಹಿತ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಮಹಾಕಾಳಿ, ಕಾತ್ಯಾಯನಿ, ಸ್ಕಂದಮಾತಾ, ಮಹಾಗೌರಿ, ಸಿದ್ಧಿಧಾತ್ರಿಯರ ಮೂರ್ತಿಯನ್ನು ಏಕಕಾಲದಲ್ಲಿ ಪ್ರತಿಷ್ಠಾಪಿಸಲಾಯಿತು. ಅಪಾರ ಭಕ್ತರು ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಬಾರಿ ತದಿಗೆ ಉಪರಿ ಬಂದಿರುವ ಹಿನ್ನೆಲೆಯಲ್ಲಿ 11 ದಿನಗಳ ಕಾಲ ದಸರಾ ಪೂಜೆ ನಡೆಯಲಿದೆ. ಭವ್ಯ ಮೂರ್ತಿಗಳಿಗೆ ಅ. 2ರಂದು ಸಂಜೆ ವಿಸರ್ಜನಾ ಪೂಜೆಯ ನಂತರ ನಗರದಾದ್ಯಂತ ಮೆರವಣಿಗೆ ನಡೆಯಲಿದೆ. ಮರುದಿನ ಬೆಳಗ್ಗೆ ಮೂರ್ತಿಗಳನ್ನು ದೇವಸ್ಥಾನದ ಕಲ್ಯಾಣಿಯಲ್ಲಿ ಜಲಸ್ತಂಭನ ಮಾಡಲಾಗುತ್ತದೆ.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಮ್, ಉರ್ಮಿಳಾ ರಮೇಶ್, ಬಿ. ಮಾಧವ ಸುವರ್ಣ, ಸದಸ್ಯರಾದ ಎಚ್.ಎಸ್. ಸಾಯಿರಾಮ್, ಕ್ಷೇತ್ರಾಭಿವೃದ್ಧಿ ಸಮಿತಿಯ ದೇವೇಂದ್ರ ಪೂಜಾರಿ, ಹರಿಕೃಷ್ಣ ಬಂಟ್ವಾಳ್, ಡಾ.ಬಿ.ಸುವರ್ಣ, ಲೀಲಾಕ್ಷ ಕರ್ಕೇರ ಮೊದಲಾದವರಿದ್ದರು.
ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಮಾತನಾಡಿ, ಮಂಗಳೂರು ದಸರಾದ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆದಿದೆ. ಈ ಬಾರಿ ದಾಖಲೆಯ ಸಂಖ್ಯೆಯಲ್ಲಿ ಪ್ರತಿಷ್ಠಾಪನೆಗೆ ಜನಸಾಗರ ಹರಿದುಬಂದಿದೆ. ಹತ್ತು ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.