ಲೋಕಬಂಧು ನ್ಯೂಸ್, ಉಡುಪಿ
ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಇಲ್ಲಿನ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ನಿಗಮದ ನಿರ್ದೇಶಕ ಮಾಲತೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಿಗಮದ ಯೋಜನೆಗಳಿಗೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗದ ಪರಿಣಾಮ 2024- 25ನೇ ಸಾಲಿನಲ್ಲಿ 10 ಕೋ. ರೂ. ಅನುದಾನದ ಪೈಕಿ 6.5 ಕೋಟಿ ರೂ. ವಾಪಾಸಾಗಿತ್ತು. ಪ್ರಸ್ತುತ ಅನೇಕ ಕಡೆಗಳಲ್ಲಿ ಮಾಹಿತಿ ಶಿಬಿರ ಆಯೋಜಿಸುತ್ತಿರುವುದರಿಂದ ಅರ್ಜಿಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದರು.
ಸ್ವಉದ್ಯೋಗಕ್ಕೆ ಶೇ.20ರಷ್ಟು ಸಬ್ಸಿಡಿ ಹಾಗೂ ಶೇ.4ರಷ್ಟು ಬಡ್ಡಿದರಲ್ಲಿ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯುವವರಿಗೆ ಪ್ರತಿವರ್ಷ 15 ಸಾವಿರ ರೂ. ವಿದ್ಯಾರ್ಥಿ ವೇತನ, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಓದುವವರಿಗೆ ಸರಕಾರಿ ಶುಲ್ಕದಲ್ಲಿ 2/3ರಷ್ಟು ಶುಲ್ಕ ಭರಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ 1 ಲಕ್ಷ ರೂ. ನೀಡಲಾಗುವುದು ಎಂದರು.
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಮಹಾಸಭಾದ ಪ್ರೊ.ಶಂಕರ್, ದುರ್ಗಾ ಪ್ರಸಾದ್ ಉಪಸ್ಥಿತರಿದ್ದರು.
ವಿನಯ ಕುಮಾರ್ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು.
