ಉಡುಪಿ | ಲೋಕಬಂಧು ನ್ಯೂಸ್
ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ ಕ್ಯಾನ್ಸರ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಿ ಆರೋಗ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸಾಂಕ್ರಾಮಿಕ ರೋಗಗಳ ಘಟಕ ಎನ್.ಸಿಡಿ. ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ, ಆದರ್ಶ ಆಸ್ಪತ್ರೆ ಉಡುಪಿ, ಆದರ್ಶ ಇನ್ಸ್ಟಿಟ್ಯೂಷನ್ ಆಫ್ ನರ್ಸಿಂಗ್, ಉಡುಪಿ ಕಾಲೇಜ್ ಆಫ್ ನರ್ಸಿಂಗ್, ಸಿಎಸ್ಐ ಲೊಂಬಾರ್ಡ್ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಸಹಯೋಗದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆ, ಆರೋಗ್ಯ ಸೇವೆಯಲ್ಲಿಯೂ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಜಿಲ್ಲೆಯ ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಸಮಾಜ ಸೇವೆಯಲ್ಲಿ ನಿರತರಾಗಿರುವ ವೈದ್ಯಾಧಿಕಾರಿಗಳು ಅಸಾಂಕ್ರಾಮಿಕ ರೋಗಗಳ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಜನರು ಕೂಡಾ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪೋಷಕಾಂಶಯುಕ್ತ ಆಹಾರ ಸೇವನೆ ಮತ್ತು ದಿನನಿತ್ಯ ಕನಿಷ್ಠ 2 ಗಂಟೆ ವ್ಯಾಯಾಮ ಮಾಡುವ ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದರು.
ನೂತನ ಜಿಲ್ಲಾಸ್ಪತ್ರೆಯ ಕಾಮಗಾರಿ ಶೇ. 70ರಷ್ಟು ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆಸ್ಪತ್ರೆ ಸಾರ್ವಜನಿಕರಿಗೆ ಮುಕ್ತವಾದಲ್ಲಿ ಜಿಲ್ಲೆಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲಿದೆ ಎಂದರು.
ಎಂಸಿಎಚ್ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ.ಅನಂತ ಎಸ್. ಮಠದ್ ಕ್ಯಾನ್ಸರ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕೀಮೋ ಚಿಕಿತ್ಸೆ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್, ಫುಡ್ ಫಾರ್ ದ ಹಂಗ್ರಿ ಫೌಂಡೇಶನ್‌ನ ನಿಧಿ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ ಈ.ಆರ್. ಇದ್ದರು
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಕಲಾ ನಿರೂಪಿಸಿ, ಶಶಿಧರ ಎಚ್. ವಂದಿಸಿದರು.
ಕಾರ್ಯಕ್ರಮದ ನಂತರ ಜಿಲ್ಲಾಸ್ಪತ್ರೆ ಆವರಣದಿಂದ ಬ್ರಹ್ಮಗಿರಿ ಸರ್ಕಲ್ ಸುತ್ತುವರಿದು ಪುನಃ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಮಾಪನಗೊಂಡ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಸರ್ಜನ್ ಡಾ.ಎಚ್. ಅಶೋಕ್ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು.