ಹೆಣ್ಣುಮಕ್ಕಳ ಸುರಕ್ಷತೆಗೆ ಪೂರಕ ವಾತಾವರಣ ಕಲ್ಪಿಸಿ

ಉಡುಪಿ | ಲೋಕಬಂಧು ನ್ಯೂಸ್
ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಅವರಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಸಮಾನ ಹಕ್ಕು ನೀಡಿ, ಸಬಲರನ್ನಾಗಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ (ಹೆಣ್ಣುಮಗಳನ್ನು ರಕ್ಷಿಸಿ- ಹೆಣ್ಣು ಮಗಳನ್ನು ಓದಿಸಿ) ಯೋಜನೆಯಡಿ ಪ್ರಸವಪೂರ್ವ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ -1976ರ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬುಧವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.


ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಭಯಮುಕ್ತ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ ಅವರನ್ನು ಪುರುಷರಿಗೆ ಸಮಾನವಾಗಿ ಕಾಣಬೇಕು. ಹೆಣ್ಣುಮಕ್ಕಳ ಪ್ರಾಮುಖ್ಯತೆ ಬಗ್ಗೆ ಪ್ರತಿಯೊಬ್ಬರೂ ಅರಿತಾಗ ಮಾತ್ರ ಲಿಂಗಾನುಪಾತದ ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂದರು.


ಕೆಲಸದ ಸ್ಥಳದಲ್ಲಿ ಮಹಿಳೆಯರು ಎದುರಿಸುವ ಲೈಂಗಿಕ ಕಿರುಕುಳಗಳಿಗೆ ಸಂಬಂಧಿಸಿದ ದೂರು ದಾಖಲಿಸಲು ಆಂತರಿಕ ದೂರು ಸಮಿತಿ ವ್ಯವಸ್ಥೆ ಇದ್ದು, ಅದರ ಪ್ರಯೋಜನವನ್ನು ಮಹಿಳಾ ಉದ್ಯೋಗಿಗಳು ಪಡೆದುಕೊಳ್ಳಬಹುದು ಎಂದ ಅವರು, ಸಮಾಜದಲ್ಲಿ ಕಾಡುತ್ತಿರುವ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಕೈಜೋಡಿಸಬೇಕು ಎಂದರು.


ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಮಹಿಳೆಯರು ಹಾಗೂ ಪುರುಷರು ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲೂ ಇದ್ದಾಗ ಮಾತ್ರ ಸಮಾಜದಲ್ಲಿ ಲಿಂಗ ತಾರತಮ್ಯ ಹೋಗಲಾಡಿಸಬಹುದು. ಹೆಣ್ಣುಮಕ್ಕಳನ್ನು ಭ್ರೂಣಾವಸ್ಥೆಯಿಂದಲೇ ರಕ್ಷಿಸುವ ಕೆಲಸವಾಗಬೇಕು. ಆಗ ಮಾತ್ರ ಲಿಂಗಾನುಪಾತದಲ್ಲಿ ಸುಧಾರಣೆ ತರಲು ಸಾಧ್ಯ ಎಂದರು.


ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪ್ರಧಾನ ಕುಟುಂಬ ವ್ಯವಸ್ಥೆ ಇರುವುದರಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಲಿಂಗ ತಾರತಮ್ಯದಂಥ ಪ್ರಕರಣಗಳು ಹೆಚ್ಚು ಕಂಡುಬರುತ್ತಿಲ್ಲ.


ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಮಹಿಳೆಯರು ತಮ್ಮದೇ ಪ್ರಾಬಲ್ಯ ತೋರಿಸುತ್ತಿದ್ದಾರೆ. ಪುರುಷರಿಗಿಂತ ಹೆಣ್ಣುಮಕ್ಕಳು ಯಾವ ಕ್ಷೇತ್ರದಲ್ಲಿಯೂ ಕಡಿಮೆಯಿಲ್ಲ ಎನ್ನುವುದಕ್ಕೆ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಸಮಾಜದಲ್ಲಿ ಯಾವುದೇ ರೀತಿಯ ಹೆಣ್ಣು ಭ್ರೂಣ ಹತ್ಯೆ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ, ಲಿಂಗ ತಾರತಮ್ಯ ಮತ್ತಿತರ ದೌರ್ಜನ್ಯ ಪ್ರಕರಣಗಳನ್ನು ಸೂಕ್ಷ್ಮವಾಗಿ ನಿಭಾಯಿಸಿ, ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳನ್ನು ಅನುಷ್ಠಾನ ಮಾಡುವ ಬಗೆಗಿನ ಪ್ರಕ್ರಿಯೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಹೊಂದಿರಬೇಕು. ಕೆಲಸದ ಸ್ಥಳಗಳಲ್ಲಿ, ಕೌಟುಂಬಿಕ ವಾತಾವರಣದಲ್ಲಿ ಮಹಿಳೆಯರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಮಗೆ ಅರಿವಿಲ್ಲದಂತೆ ಲಿಂಗ ತಾರತಮ್ಯ ಅನುಭವಿಸುತ್ತಿದ್ದಾರೆ. ಸರ್ಕಾರಿ, ಖಾಸಗಿ ಸೇರಿದಂತೆ ಇತರ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು, ಕೆಲಸದ ಸ್ಥಳಗಳಲ್ಲಿ ಲೈಂಗಿಕ ದೌಜ್ಯನ್ಯದಂಥ ಪ್ರಕರಣ ಎದುರಿಸಿದಾಗ ಆಂತರಿಕ ದೂರು ಸಮಿತಿಯಲ್ಲಿ ದೂರು ದಾಖಲಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಎನ್ಫೋರ್ಸ್'ಮೆಂಟ್ ಆಫೀಸರ್ ಡಾ.ರಾಮ ರಾವ್ ಕೆ. ಪ್ರಸವಪೂರ್ವ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ ಕುರಿತು, ವಕೀಲ ರಾಜೇಶ್ ಪಿ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಬಗ್ಗೆ, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ನಿಕೇತನ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಹಾಗೂ ಮಂಗಳೂರು ಸೈಂಟ್ ಅಲೋಶಿಯಸ್ ಕಾನೂನು ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಾಯನ್ ಫೆರ್ನಾಂಡಿಸ್ ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ-1976ರ ಬಗ್ಗೆ ಮಾಹಿತಿ ನೀಡಿದರು.


ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ಯಾಮ್ ಎಸ್. ಕಾದ್ರೋಳ್ಳಿ, ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹ್ಮದ್ ಮೊದಲಾದವರಿದ್ದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧ ಬಿ. ಹಾದಿಮನಿ ಸ್ವಾಗತಿಸಿದರು. ದೀಪಾ ನಿರೂಪಿಸಿ, ಶಾರದ ವಂದಿಸಿದರು.