ಲೋಕಬಂಧು ನ್ಯೂಸ್, ಉಡುಪಿ
ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ ಉಭಯ ತಿಟ್ಟುಗಳ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ನಿಯೋಗ ಮಂಗಳವಾರ ಸ್ಪೀಕರ್ ಯು.ಟಿ .ಖಾದರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವಂತೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ತಂಡದಿಂದ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ ಮತ್ತು ಪುಟ್ಟಸ್ವಾಮಿ ಎ.ಆರ್. ಇದ್ದರು.