ಉಡುಪಿ | ಲೋಕಬಂಧು ನ್ಯೂಸ್
ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹಿಸಿದರು.
ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. 6 ಸಾವಿರ ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ಮತ್ತು ಪರವಾನಿಗೆ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಸ್ವತಃ ಮದ್ಯ ಮಾರಾಟಗಾರರ ಸಂಘವೇ ಆರೋಪಿಸಿದೆ. ಇಷ್ಟೆಲ್ಲಾ ಗಂಭೀರ ಆರೋಪಗಳು ಕೇಳಿಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತಿಮ್ಮಾಪುರ ಅವರನ್ನು ಸಂಪುಟದಿಂದ ಕೈಬಿಡಲು ಹಿಂದೇಟು ಹಾಕುತ್ತಿರುವುದು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಕರ್ನಾಟಕ ಸರ್ಕಾರ ಕಾಂಗ್ರೆಸ್ ಹೈಕಮಾಂಡ್'ಗೆ ಎಟಿಎಂ ಆಗಿ ಪರಿವರ್ತನೆಯಾಗಿದೆ. ಜನರ ದುಡ್ಡು ಪೋಲಾಗುತ್ತಿದೆ. ಅಭಿವೃದ್ಧಿ ಸ್ಥಗಿತಕೊಂಡಿದೆ ಎಂದು ಪ್ರತಾಪಸಿಂಹ ನಾಯಕ್ ಕಿಡಿಕಾರಿದರು.
ಜನರ ಸಮಸ್ಯೆ ಬಗ್ಗೆ ಚರ್ಚೆಗೆ ಅವಕಾಶವಿಲ್ಲದೆ ಅಧಿವೇಶನ ಮುಗಿದಿದೆ. ಹಾಗಾಗಿ ಜನತಾ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದರು.
ಹತಾಶ ಕಾಂಗ್ರೆಸ್
ಸತತ ಚುನಾವಣಾ ಸೋಲಿನಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಎನ್‌ಡಿಎ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ವಿರೋಧಿಸುವ ಮನೋಭಾವ ಬೆಳೆಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ಪ್ರಧಾನಿ ಮೇಲೆ ಆಕ್ರಮಣಕ್ಕೆ ಸಿದ್ಧತೆ ನಡೆದಿತ್ತು ಎಂಬ ಸ್ಪೀಕರ್ ಹೇಳಿಕೆ ಆತಂಕಕಾರಿಯಾಗಿದೆ. ಕಳೆದ 20 ವರ್ಷದಲ್ಲಿ ನರೇಗಾ ಯೋಜನೆಯಲ್ಲಿ ಹಳ್ಳಿಗಳಿಗೆ 10 ಲಕ್ಷ ಕೋಟಿ ರೂ. ವ್ಯಯಿಸಲಾಗಿದೆ. ಆದರೆ, ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಹಣ ದುರುಪಯೋಗ ತಡೆಗಾಗಿ ವಿಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನಾಯಕ್, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಮತ್ತು ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.