ಲೋಕಬಂಧು ನ್ಯೂಸ್, ಲಕ್ನೋ
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತವರ ಶಿಷ್ಯನ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್‌ನ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ.ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಪೊಲಿಸರಿಗೆ ನಿರ್ದೇಶನ ನೀಡಿದ್ದಾರೆ.
ಝೂಸಿ ಪೊಲೀಸ್ ಠಾಣೆಯಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತವರ ಶಿಷ್ಯನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಾರಾಣಸಿಯಲ್ಲಿನ ಆಶ್ರಮದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅರೋಪಿಸಿ ಮಥುರಾ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಅಶುತೋಷ್ ಬ್ರಹ್ಮಚಾರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಕ್ಕಳ ಹೇಳಿಕೆ ದಾಖಲಿಸಿಕೊಂಡು, ಪೊಲೀಸರ ವರದಿ ಪರಿಶೀಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದ ಸಿ.ಡಿ.ಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಅರ್ಜಿದಾರರು ತಿಳಿಸಿದ್ದಾರೆ.