ಲೋಕಬಂಧು ನ್ಯೂಸ್, ಕುಂದಾಪುರ
ಅಮಾಸೆಬೈಲು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ 5 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.ಅಮಾಸೆಬೈಲು ಶಾಲೆಗೆ ಹೋಗುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಹೋಗಿ ಕರೆದುಕೊಂಡು ಬರುತ್ತಿದ್ದ ರಿಕ್ಷಾ ಚಾಲಕ ಶರತ್ ಶೆಟ್ಟಿ ಹಾಗೂ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಆ ಬಗ್ಗೆ ನೊಂದ ಬಾಲಕಿ ಶಾಲಾ ಅಧ್ಯಾಪಕರಿಗೆ ಮಾಹಿತಿ ನೀಡಿದ್ದು, ಅಧ್ಯಾಪಕರು ದಿನಾಂಕ 2025ರ ಜುಲೈ 15ರಂದು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಉಡುಪಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಫೆಬ್ರವರಿ 5ರಂದು ಗುರುವಾರ ಶರತ್ ಶೆಟ್ಟಿ ಹಾಗೂ ಪ್ರಶಾಂತ್ ನಾಯ್ಕ್'ಗೆ ತಲಾ 5 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಸರಕಾರಿ ಅಭಿಯೋಜಕರಾದ ಪ್ರಕಾಶ್ಚಂದ್ರ ಶೆಟ್ಟಿ, ಜಯರಾಮ ಶೆಟ್ಟಿ ಹಾಗೂ ವೈ.ಟಿ. ರಾಘವೇಂದ್ರ ನೊಂದ ಬಾಲಕಿಯ ಪರವಾಗಿ ವಾದ ಮಂಡಿಸಿದ್ದರು.