ಲೋಕಬಂಧು ನ್ಯೂಸ್, ಉಡುಪಿ
ಸ್ಥಳೀಯ ನಗರಸಭೆಯ ನಿಟ್ಟೂರು ಒಳಚರಂಡಿ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕ ಪರಿಸರದಲ್ಲಿ ಸ್ಥಳೀಯ ಜನರಿಗೆ ದುರ್ವಾಸನೆ ಹಾಗೂ ಕುಡಿಯುವ ನೀರಿನ ಬಾವಿಗಳಿಗೆ ಕಲುಷಿತ ನೀರು ಸೇರುವ ಬಗ್ಗೆ ದೂರುಗಳು ಬರುತ್ತಿದ್ದು, ಆ ಬಗ್ಗೆ ತಕ್ಷಣ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹಸಿರು ಪೀಠದ ಆದೇಶದ ಮೇರೆಗೆ ಮಂಜೂರಾದ 30 ಕೋಟಿ ಅನುದಾನದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ಮಟ್ಟ ಹೆಚ್ಚಿಸುವ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.
ವೇಗವಾಗಿ ಬೆಳೆಯುತ್ತಿರುವ ಉಡುಪಿ ನಗರದ ಒಳಚರಂಡಿ ಕೊಳಚೆ ನೀರು ಶುದ್ಧೀಕರಣ ಘಟಕದ ಸಾಮರ್ಥ್ಯ ವಿಸ್ತರಿಸುವ ನಿಟ್ಟಿನಲ್ಲಿ ತಕ್ಷಣ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಮಾಜಿ ಸದಸ್ಯರಾದ ಸಂತೋಷ್ ಜತ್ತನ್, ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಹರೀಶ್ ಶೆಟ್ಟಿ, ಸುಂದರ ಕಲ್ಮಾಡಿ, ಮಂಜುನಾಥ ಮಣಿಪಾಲ, ಅಶೋಕ್ ನಾಯ್ಕ್, ಗಿರಿಧರ ಆಚಾರ್ಯ ಕರಂಬಳ್ಳಿ ಮತ್ತು ಟಿ. ಜಿ. ಹೆಗ್ಡೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್ ಮೊದಲಾದವರಿದ್ದರು.