ಲೋಕಬಂಧು ನ್ಯೂಸ್ ಬೆಂಗಳೂರು, ಮಾ.12
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ
ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಗುರುವಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ರಾಜ್ಯ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಜಿಲ್ಲೆಗೆ ಒಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಉದ್ದೇಶ ರಾಜ್ಯದ ಜನತೆಗೆ ವೈದ್ಯಕೀಯ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆಗೆ ಆವಶ್ಯಕವಾಗಿದೆ. ಹೆಚ್ಚಿನ ಜಿಲ್ಲೆಗಳು ಸರಕಾರಿ ಮೆಡಿಕಲ್ ಕಾಲೇಜು ಹೊಂದಿದ್ದು, ಕಳೆದ ಬಜೆಟ್‌ನಲ್ಲಿ ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಿಸಲಾಗಿದೆ.
ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಗತ್ಯವಿದ್ದು, ಇದು ಜಿಲ್ಲೆಯ ಜನತೆಯ ಹಲವು ದಶಕಗಳ ಕನಸಾಗಿದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾದರೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಲಭಿಸಿದಂತಾಗುತ್ತದೆ ಮತ್ತು ಸಾರ್ವಜನಿಕರಿಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಲಭಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಉತ್ತಮ ಅವಕಾಶವೂ ಸಿಗಲಿದೆ.
ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುಕೂಲವಾಗುವಂತೆ ಈಗಾಗಲೇ ಸರಕಾರಿ ಜಾಗ ಗುರುತಿಸಲಾಗಿದೆ. ಉಪ್ಪೂರು ಗ್ರಾಮದ ಸರ್ವೆ ನಂಬರ್ 293/1ಎ1ರಲ್ಲಿ 18.80 ಎಕ್ರೆ ಮತ್ತು 232ರಲ್ಲಿ 12 ಎಕ್ರೆ ಸರಕಾರಿ ಜಾಗವನ್ನು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಕಾಯ್ದಿರಿಸಲಾಗಿದ್ದು, ಅಗತ್ಯ ಮೂಲಸೌಕರ್ಯಗಳೊಂದಿಗೆ ಈ ಜಾಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಲು ಅತ್ಯಂತ ಅನುಕೂಲಕರವಾಗಿದೆ.
ರಾಜ್ಯ ಸರ್ಕಾರ ಈ ಬಗ್ಗೆ ವಿಶೇಷ ಆದ್ಯತೆ ನೀಡಿ ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಿಸಿ, ತ್ವರಿತವಾಗಿ ಆಡಳಿತಾತ್ಮಕ ಅನುಮತಿ ನೀಡುವಂತೆ ಮತ್ತು ಅಗತ್ಯ ಅನುದಾನ ಮೀಸಲಿಡುವಂತೆ ಶಾಸಕ ಯಶಪಾಲ್ ಸುವರ್ಣ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಿಗೆ ಮನವಿ ಮಾಡಿದರು.
ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಈಗಾಗಲೇ ಪ್ರತೀ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಬಗ್ಗೆ ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದಾಗಿ ಭರವಸೆ ನೀಡಿದರು.