ಲೋಕಬಂಧು ನ್ಯೂಸ್ ಉಡುಪಿ, ಮಾ.20
ಜಿಲ್ಲೆಯಾದ್ಯಂತ ಶುಕ್ರವಾರ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬ ಸಂಭ್ರಮ ಸಡಗರದಿಂದ ಆಚರಿಸಿದರು.ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.
ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮಿಯಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಹಬ್ಬದ ಶುಭಾಶಯ ತಿಳಿಸಿದರು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್'ನಲ್ಲಿ ಪಾಲ್ಗೊಂಡರು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.
ಉಡುಪಿ ಬ್ರಹ್ಮಗಿರಿ ನಾಯರ್ ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ್ ರಹ್ಮಾನ್ ನದ್ವಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನಿರ್ವಹಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಿದರು. ಅಲ್ಲದೆ, ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.
ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಬಹುತೇಕ ಮಸೀದಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.