ಲೋಕಬಂಧು ನ್ಯೂಸ್ | ಉಡುಪಿ, ಮಾ.15
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.18ರಿಂದ ಏ. 2ರ ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷೆಗಳು ಯಾವುದೇ ಲೋಪದೋಷಗಳಾಗದಂತೆ ಪರೀಕ್ಷಾ ಪಾವಿತ್ರ್ಯತೆ ಕಾಪಾಡುವುದರೊಂದಿಗೆ ಸುಲಲಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಅದಕ್ಕೆ ಜಿಲ್ಲಾಡಳಿತ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಜಿಲ್ಲೆ ಶೇ.100 ಫಲಿತಾಂಶ ದಾಖಲಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಹೊಸದಾಗಿ 13,516 ವಿದ್ಯಾರ್ಥಿಗಳು, 295 ರೆಗ್ಯುಲರ್ ಪುನರಾವರ್ತಿತ ಅಭ್ಯರ್ಥಿಗಳು, 293 ಖಾಸಗಿ ಅಭ್ಯರ್ಥಿಗಳು ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅವರಲ್ಲಿ 7,353 ಗಂಡು ಮಕ್ಕಳು ಹಾಗೂ 6,798 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 14,151 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಡುಪಿ ವಲಯದಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಕೇಂದ್ರದ ಕ್ಯಾಂಪಸ್'ಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. 51 ಪರೀಕ್ಷಾ ಕೇಂದ್ರಗಳಲ್ಲಿ 686 ಕೊಠಡಿಗಳನ್ನು ಪರೀಕ್ಷಾ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಯಶಸ್ವಿಯಾಗಿ ಪರೀಕ್ಷೆ ನಿರ್ವಹಿಸಲು ಅಧೀಕ್ಷಕರು, ಮೇಲ್ವಿಚಾರಕರು, ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್ ಅಧಿಕಾರಿಗಳು ಸೇರಿದಂತೆ 1,350 ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್'ಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ. ಕೇಂದ್ರಗಳಲ್ಲಿ ಗಡಿಯಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿರುವ ಬಗ್ಗೆ ಪರಿಶೀಲಿಸಲು ತಂಡ ನೇಮಿಸಲಾಗಿದೆ ಎಂದರು.
ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವುದರೊಂದಿಗೆ ಸಾಕಷ್ಟು ಬಸ್‌ಗಳನ್ನು ಪರೀಕ್ಷಾ ಸಂದರ್ಭ ಕಾರ್ಯಾಚರಿಸುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಬಳಿಯೇ ಬಸ್ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಆರಂಭದಿಂದ ಏಪ್ರಿಲ್ ಅಂತ್ಯದ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತೆ ವಹಿಸುವಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಕ್ಕಳು ಬಿಸಿಲಿನ ಶಾಖಾಘಾತಕ್ಕೆ ತುತ್ತಾಗುವ ಸಂಭವವಿದ್ದು, ಅವರಿಗೆ ತೊಂದರೆ ಆಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ತುರ್ತು ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ನಿಯೋಜಿಸಬೇಕು. ಓ.ಆರ್.ಎಸ್ ದ್ರಾವಣ ಸಂಗ್ರಹಿಸಿಟ್ಟಲು ಕ್ರಮ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೆಲವು ನಿಯಮಾವಳಿಗಳನ್ನು ಸಡಿಲಗೊಳಿಸಿದ್ದು, ವಿದ್ಯಾರ್ಥಿಗಳು ಉತ್ತೀರ್ಣರಾಗುವ ಜೊತೆಗೆ ಉನ್ನತ ಶ್ರೇಣಿ ಪಡೆಯಲು ಪ್ರಯತ್ನಿಸುವಂತೆ ಅವರಿಗೆ ಪ್ರೋತ್ಸಾಹ ನೀಡಿ, ಮನವೊಲಿಸಬೇಕು. ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಿ, ನಮ್ಮದೇ ಮಕ್ಕಳು ಎಂದು ಭಾವಿಸಿ ಅವರ ಕಾಳಜಿ ಮಾಡಬೇಕು ಎಂದರು.
ಮಂಗಳೂರು ಸಿ.ಟಿ.ಇ ಪ್ರಾಂಶುಪಾಲೆ ಹಾಗೂ ಸಹ ನಿರ್ದೇಶಕಿ ಪುಷ್ಪಲತಾ ಮಾತನಾಡಿ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಪರೀಕ್ಷಾ ಮಾರ್ಗಸೂಚಿಯನ್ವಯ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆ ಶೈಕ್ಷಣಿಕವಾಗಿ ಮುಂದಿದ್ದು ಎಲ್ಲಾ ಸವಾಲುಗಳನ್ನು ಎದುರಿಸಿ, ಅದನ್ನು ಮುಂದುವರಿಸಿಕೊಂಡು ಹೋಗುವುದರೊಂದಿಗೆ ಮಕ್ಕಳು ಉತ್ತಮ ರೀತಿಯಲ್ಲಿ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.
ಸಭೆಯಲ್ಲಿ ಸಹಾಯಕ ಕಮೀಷನರ್ ರಶ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ್ ಹುಬ್ಬಳ್ಳಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಉಪಸ್ಥಿತರಿದ್ದರು.
