ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಲೋಕಬಂಧು ನ್ಯೂಸ್, ಬೆಂಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ 2026– 27ನೇ ಸಾಲಿನ ರಾಜ್ಯದ ಆಯವ್ಯಯ‌‌ (ಬಜೆಟ್)ದ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್‌ಪ್ಲೇ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾ. 6ರಂದು ಬೆಳಿಗ್ಗೆ 10.15ರಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.


ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಯವರ‌ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ ಎಂದರು. 

ಆ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶ ಪಡೆಯಲಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದದ್ದು, ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.