ಮಾ.11ರಿಂದ ಆರೋಗ್ಯ ಇಲಾಖೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಲೋಕಬಂಧು ನ್ಯೂಸ್, ಉಡುಪಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ನಿಕಿನ್ ಶೆಟ್ಟಿ ಹೇಳಿದರು.ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾ. 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧಿಕಾರಿಗಳು, ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ತುರ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಒಪಿಡಿಗಳನ್ನು ಬಂದ್ ಮುಷ್ಕರ ನಡೆಸಲಾಗುವುದು. ಮಾ. 15ರ ವರೆಗೆ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಮಾ. 16ರಿಂದ ತುರ್ತು ಸೇವೆಗಳನ್ನೂ ಸ್ಥಗಿತಗೊಳಿಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.


ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ಸಂಖ್ಯೆ ನಿವೃತ್ತಿ ಮತ್ತು ಇತರ ಕಾರಣಗಳಿಂದ ಕಡಿಮೆಯಾಗುತ್ತಿದ್ದು ಖಾಲಿ ಹುದ್ದೆಗಳ ಭರ್ತಿಯಾಗುತ್ತಿಲ್ಲ. ಹಾಗಾಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಸರ್ಕಾರ ಔಷಧಗಳನ್ನು ಪೂರೈಕೆ ಮಾಡುತ್ತಿಲ್ಲ. ಇನ್ಸುಲಿನ್, ರೇಬಿಸ್ ವ್ಯಾಕ್ಸಿನ್, ಐವಿ ಫೂಯಿಡ್ಸ್, ಆಂಟಿ ಬಯಾಟಿಕ್ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ. ಈ ಔಷಧಿಗಳನ್ನು ಲೋಕಲ್ ಫಂಡ್ ಮುಖಾಂತರ ಖರೀದಿಸಲು ಅಷ್ಟೊಂದು ಹಣವಿಲ್ಲದೇ ಇರುವುದರಿಂದ ವೈದ್ಯರಿಗೆ ಅಸಹಾಯಕ ಪರಿಸ್ಥಿತಿ ಉಂಟಾಗಿದೆ ಎಂದರು.


ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ ಹಾಗೂ ನೌಕರರಿಗೆ ಕಳೆದ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ಡಾಟಾ ಇಲ್ಲ ಎನ್ನುವ ನೆಪವೊಡ್ಡಿ ವೈದ್ಯರ ಪದೋನ್ನತಿ ನಿಲ್ಲಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ 3 ತಿಂಗಳಿಗೊಮ್ಮೆ ವೇತನ ನೀಡಲಾಗುತ್ತಿದೆ. ಈ ಎಲ್ಲಾ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.


ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಡಾ.ಸಂದೀಪ್, ಕಾರ್ಯದರ್ಶಿ ಡಾ.ರಾಜೇಶ್ ಸಿ.ಎಸ್., ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ದಿನಕರ ಶೆಟ್ಟಿ, ಆರೋಗ್ಯ ಇಲಾಖೆ ಕೇಂದ್ರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆನಂದ ಜತ್ತನ್ ಮೊದಲಾದವರಿದ್ದರು.