ಕಟಪಾಡಿ: ಗ್ಯಾಸ್ ಟ್ಯಾಂಕರ್ ಅಪಘಾತ- ಕೆಲಕಾಲ ಸಂಚಾರ ಅಸ್ತವ್ಯಸ್ತ

ಲೋಕಬಂಧು ನ್ಯೂಸ್ | ಉಡುಪಿ, ಮಾ.16
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿ ಸೋಮವಾರ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಗೆ ಅಡ್ಡವಾಗಿ ಮಗುಚಿಬಿದ್ದ ಘಟನೆ ನಡೆದಿದ್ದು, ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತು.
ಟ್ಯಾಂಕರ್ ಸಾಗುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗುವ ಸಾಧ್ಯತೆಯಿದ್ದರಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಟ್ಯಾಂಕರ್ ಸಮೀಪ ಜನರು ಹೋಗದಂತೆ ಎಚ್ಚರಿಕೆ ನೀಡಿದರು. ಅಲ್ಲದೆ, ಮೊಬೈಲ್ ಫೋನ್ ಮೂಲಕ ಫೋಟೊ ಅಥವಾ ವೀಡಿಯೊ ತೆಗೆಯದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದರು.


ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನ ಸ್ಥಿತಿಯನ್ನು ಪರಿಶೀಲಿಸಿದರು. ಅನಿಲ ಸೋರಿಕೆ ಸಂಭವಿಸಿರುವುದೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಯಾವುದೇ ಅಪಾಯ ಸಂಭವಿಸದಂತೆ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.


ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಹಲವಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.


ಸ್ಥಳಕ್ಕೆ ಕಾಪು ಪೊಲೀಸ್‌ ಠಾಣೆ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಸಂಚಾರ ನಿಯಂತ್ರಣ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ವಾಹನ ಸಂಚಾರವನ್ನು ಹಂತ ಹಂತವಾಗಿ ಪುನಃ ಆರಂಭಿಸಲಾಗಿದೆ.