ಸೊರಕೆಯಿಂದ ಚಿಲ್ಲರೆ ರಾಜಕೀಯ

ಉಡುಪಿ: ಜಾನಪದ ಕ್ರೀಡೆಯಾದ ಕಂಬಳ ವಿಚಾರದಲ್ಲಿ ಸ್ವತಃ ಕಂಬಳ ಆಯೋಜಕರಾದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಚಿಲ್ಲರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಕಿಡಿಕಾರಿದರು.ಸೋಮವಾರ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ವಿನಾಕಾರಣ ಸಮಸ್ಯೆ ತಂದೊಡ್ಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ತಪ್ಪು ಮಾಹಿತಿ ನೀಡಿದ್ದಾರೆ. ಅವರಿಗೆ ಒತ್ತಡ ಹೇರಿ ಕಂಬಳ ನಿಲ್ಲಿಸುವ ಕುತಂತ್ರ ನಡೆಸಲಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಸ್ತುವಾರಿ ಸಚಿವರಿಗೆ ಕಪ್ಪುಬಟ್ಟೆ ಪ್ರದರ್ಶಿಸಿ ಕಾರ್ಯಕ್ರಮ ಬಹಿಷ್ಕರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಮತ್ತೊಮ್ಮೆ ಕಂಬಳ ಕರೆ ನಿರ್ಮಾಣಕ್ಕೆ ಭೂಮಿಪೂಜೆ ನಡೆಸಿದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಒತ್ತಡದಿಂದಾಗಿ ಕಂಬಳಕ್ಕೆ ಗುದ್ದಲಿ ಪೂಜೆ ನೆರವೇರಿಸಿರುವ ನಮ್ಮೆಲ್ಲರ ಮೇಲೆ ಪೊಲೀಸ್ ವರಿಷ್ಠಾಧಿಕಾರಿ
ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಂಬಳಕ್ಕೆಂದು ಮೀಸಲಿಟ್ಟ ಜಾಗದಲ್ಲಿ ನಿಷೇಧಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ್ದೀರಿ ಎಂದು ಹೇಳುವ ನಿಮಗೆ ನಿಷೇಧಾಜ್ಞೆ ಹೊರಡಿಸಲು ಅಧಿಕಾರ ಕೊಟ್ಟವರು ಯಾರು ಎಂದವರು ಕಾಂಗ್ರೆಸಿಗರಿಗೆ ಪ್ರಶ್ನಿಸಿದರು.
ಕಾನೂನು ಬದ್ಧವಾಗಿಯೇ ಕಂಬಳ ಸಮಿತಿ ರಚನೆಯಾಗಿದೆ. ಆದರೆ, ಉಡುಪಿ ಎಸ್.ಪಿ. ಅವರು ಕಂಬಳ ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿಯ ಎಲ್ಲ ಬಿಜೆಪಿ ಶಾಸಕರು, ಜನಪ್ರತಿನಿಧಿಗಳ ಸಹಿತ 38 ಮಂದಿಯ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾನೂನಿನ ಬೆದರಿಕೆಯೊಡ್ಡಿದ್ದಾರೆ. ಇದು ಅತ್ಯಂತ ಕೆಟ್ಟ ಪರಂಪರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಶೆಟ್ಟಿ ಕುತ್ಯಾರು, ಮಾಜಿ ಶಾಸಕ ಲಾಲಾಜಿ ಮೆಂಡನ್ ಮೊದಲಾದವರಿದ್ದರು.