ಉಡುಪಿ | ಲೋಕಬಂಧು ನ್ಯೂಸ್
ಮಹಿಳೆಯರು ಕ್ರೀಡಾ ಮನೋಭಾವ ಹೊಂದಿ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಆ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯ, ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಹೇಳಿದರು.
ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಭಾರತ ಸರಕಾರದ ಯುವಜನ ಸೇವೆ ಮತ್ತು ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್, ಅಸ್ಮಿತಾ ಹಾಗೂ ಖೇಲೊ ಇಂಡಿಯಾ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪುರುಷರಿಗೆ ಸಮನಾಗಿ ಈಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದವರು ಹೇಳಿದರು.
ಉಡುಪಿ ಯುವಜನ ಸೇವಾ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ವಂದಿಸಿದರು. ಜೊತೆ ಕಾರ್ಯದರ್ಶಿ ಸುದರ್ಶನ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
