ಲೋಕಬಂಧು ನ್ಯೂಸ್ | ಉಡುಪಿ, ಏ.27
ನಗರದ ಸಿಟಿ ಬಸ್ ನಿಲ್ದಾಣ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಸೋಮವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರು.
ಸ್ಥಳದಲ್ಲಿಯೇ ತಹಶೀಲ್ದಾರ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಹಾನಿ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ಘಟನೆ ಬಗ್ಗೆ ಸ್ಥಳೀಯ ವರ್ತಕರಿಂದ ಮಾಹಿತಿ ಪಡೆದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಯಶಪಾಲ್ ಸುವರ್ಣ ಉಡುಪಿ ನಗರದಲ್ಲಿ ಬಹುದೊಡ್ಡ ಅಗ್ನಿ ಅವಘಡ ನಡೆದಿದ್ದು, ಕೋಟ್ಯಂತರ ರೂ. ಹಾನಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ರಕರಣದಡಿ 10 ಕೋ.ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ತಿಳಿಸಿದರು.
ಅಗ್ನಿಶಾಮಕ ದಳ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದು, ಆ ಬಗ್ಗೆಯೂ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗುವುದು. ಉಡುಪಿ ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗಿದ್ದು, ಈಗಾಗಲೇ ಪ್ರಗತಿಯಲ್ಲಿರುವ ಮಣಿಪಾಲ ಅಗ್ನಿಶಾಮಕ ದಳದ ಕಾಮಗಾರಿ ಪೂರ್ಣಗೊಳಿಸಿ ಸೇವೆಗೆ ಒದಗಿಸಲು ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಹರೀಶ್ ಶೆಟ್ಟಿ ಮತ್ತು ಗಿರಿಧರ ಆಚಾರ್ಯ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

