ಲೋಕಬಂಧು ನ್ಯೂಸ್ | ಬೆಂಗಳೂರು, ಏ.15
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಬ್ದುಲ್ ಜಬ್ಬಾರ್ ಪಕ್ಷದ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಕೆಲಸ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಕೆಪಿಸಿಸಿ ಶಿಸ್ತು ಸಮಿತಿಗೆ ಹಲವು ದೂರು ಸಲ್ಲಿಕೆಯಾಗಿತ್ತು.
ಅಧಿಕೃತ ಪ್ರಕಟನೆ
ಕಾಂಗ್ರೆಸ್ ಪಕ್ಷದ ಪ್ರಕಟಣೆಯಲ್ಲಿ 'ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪಚುನಾವಣೆ ವೇಳೆ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ' ಎಂದು ತಿಳಿಸಲಾಗಿದೆ.
ಆಂತರಿಕ ಶಿಸ್ತು ಕ್ರಮ
ಪಕ್ಷದ ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಉಪಚುನಾವಣೆಯಲ್ಲಿ ಪಕ್ಷದ ಸಂಭವನೀಯ ಸೋಲಿನ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಈ ಕ್ರಮ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.