ಲೋಕಬಂಧು ನ್ಯೂಸ್ | ಬೆಂಗಳೂರು, ಏ.3
ಮಾಜಿ ಲೋಕಾಯುಕ್ತ ಮತ್ತು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ.
ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಡಾ. ಪಿಜಿಆರ್ ಸಿಂಧ್ಯಾ ಅಭಿನಂದನ ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಅವರು, ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗಲೇ ಸಮತೋಲನ ತಪ್ಪಿ ಬಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಗಣನೀಯವಾಗಿ ಕುಸಿದಿರುವುದು ಪತ್ತೆಯಾಗಿದೆ. ಜೊತೆಗೆ, ಲಘು ಹೃದಯಾಘಾತದ ಅನುಮಾನವೂ ವ್ಯಕ್ತವಾಗಿದ್ದು, ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.
80 ವರ್ಷ ದಾಟಿದರೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ನ್ಯಾ.ಹೆಗ್ಡೆ ಅವರ ಆರೋಗ್ಯ ಏರುಪೇರಾಗಿರುವ ವಿಚಾರ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಗಣ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುತ್ತಿದ್ದಾರೆ.