ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಲೋಕಬಂಧು ನ್ಯೂಸ್ ಉಡುಪಿ, ಏ.11
ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಸಭೆಯಲ್ಲಿ 2024-25 ಹಾಗೂ 2025-26ನೇ ಸಾಲಿನ ಸಂಸದ ಪ್ರದೇಶಾಭಿವೃದ್ಧಿ ನಿಧಿಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು. ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಸ್ತುತ ಸ್ಥಿತಿ, ಬಾಕಿ ಕಾಮಗಾರಿ ಹಾಗೂ ಎದುರಾಗುತ್ತಿರುವ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದುಕೊಂಡರು. ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಹಾಗೂ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಸದ ಕೋಟ ತಿಳಿಸಿದರು.


ವಿಶೇಷವಾಗಿ ಪಂಚಾಯತ್'ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಬಾಕಿ ಕಾಮಗಾರಿಗಳಿಗೆ ತಕ್ಷಣ ತಾಂತ್ರಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆ ಪೂರ್ಣಗೊಳಿಸಿ ಅನುಷ್ಠಾನ ಮಾಡುವಂತೆ ನಿರ್ದೇಶಿಸಿದರು.


ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಪಂಚಾಯತ್'ರಾಜ್ ಇಂಜಿನಿಯರಿಂಗ್ ವಿಭಾಗದ ಶ್ರೀನಾಥ ಮೊದಲಾದವರಿದ್ದರು.