ಲೋಕಬಂಧು ನ್ಯೂಸ್ ಉಡುಪಿ, ಏ.7
ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿದ್ದು, ಶಾಖದ ಹೊಡೆತದಿಂದ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ. ಸಾರ್ವಜನಿಕರು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹೊರಡಿಸಲಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತೀ ಹೆಚ್ಚು ತಾಪಮಾನದದಿಂದಾಗಿ ಸಾಮಾನ್ಯವಾಗಿ ನಿರ್ಜಲೀಖರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತದಂಥ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಆ ಬಗ್ಗೆ ರಕ್ಷಣೆ ಪಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಪೋಸ್ಟರ್, ಬ್ಯಾನರ್, ಜಿಂಗಲ್ಸ್ ಮೂಲಕ ಮಾಹಿತಿ ನೀಡುವುದರೊಂದಿಗೆ ಅರಿವು ಮೂಡಿಸಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್. ಸೇರಿದಂತೆ ಇತರ ಔಷಧಿಗಳನ್ನು ಹೆಚ್ಚಾಗಿ ದಾಸ್ತಾನು ಇರಿಸಿಕೊಂಡಿರಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಮಾರುಕಟ್ಟೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಕುಡಿಯುವ ನೀರಿನ ಕೊರತೆ ಎದುರಾಗಬಹುದಾದ ವಾರ್ಡ್ ಹಾಗೂ ಗ್ರಾಮಗಳಲ್ಲಿ, ಬೋರ್ ವೆಲ್'ಗಳನ್ನು ಗುರುತಿಸಿ ಅವುಗಳ ಮೂಲಕ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು. ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಅಗತ್ಯ ಕ್ರಮ ವಹಿಸಬೇಕು. ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಎಂದರು.
ಬೇಸಿಗೆ ದಿನಗಳಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಈಗಿಂದಲೇ ಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯಲ್ಲಿ ದನ ಕರುಗಳಿಗೆ ಮೇವಿನ ಕೊರತೆ ಕಂಡುಬಂದಿಲ್ಲ. ಎಲ್ಲಾ ತಾಲೂಕುಗಳಲ್ಲಿ ಮುಂದಿನ 39 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ ಎಂದರು.
ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ನಿರಂತರವಾಗಿ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ತೈಲ ಸೋರಿಕೆ ಪ್ರಕರಣಗಳಾದಲ್ಲಿ ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರು ತುರ್ತು ಸಂದರ್ಭ ಎದುರಿಸುವ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ಹೊಂದಿರಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್.ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ, ಪೌರಾಯುಕ್ತ ಮಹಾಂತೇಶ್ ಹಂಗರಗಿ ಮೊದಲಾದವರಿದ್ದರು.