ಲೋಕಬಂಧು ನ್ಯೂಸ್ ಕುಂದಾಪುರ, ಏ.23
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕುಂದಾಪುರದ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್'ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಪ್ರೀತಮ್ ಪೂಜಾರಿ ಸೇರಿದಂತೆ ಒಟ್ಟು ಏಳು ಮಂದಿ ಗರಿಷ್ಠ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ.
ಬಿತ್ಕಲ್'ಕಟ್ಟೆ ನಿವಾಸಿ ಗಣಪತಿ ಪೂಜಾರಿ- ನಾಗರತ್ನ ದಂಪತಿಯ ಇಬ್ಬರ ಮಕ್ಕಳ ಪೈಕಿ ಹಿರಿಯ ಪುತ್ರ ಪ್ರೀತಮ್. ತಂದೆ ಗಣಪತಿ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್, ತಾಯಿ ನಾಗರತ್ನ ಗೃಹಿಣಿ.
ಎಲ್.ಕೆ.ಜಿ.ಯಿಂದಲೂ ಈತ ಮದರ್ ಥೆರೆಸಾ ಸಂಸ್ಥೆಯಲ್ಲಿ ಕಲಿತಿದ್ಧ. ಸಾಧಕ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ, ಅಂದಿನ ಪಾಠವನ್ನು ಅಂದೇ ಕಣ್ಣುಹಾಯಿಸುತ್ತಿದ್ದೆ. ಪಠ್ಯವನ್ನು ಓದಿ ಮುಗಿಸಲು ತಿಂಗಳ ಗುರಿಯನ್ನು ಇಟ್ಟುಕೊಂಡಿದ್ದೆ. ಪೋಷಕರು ಹಾಗೂ ವಿದ್ಯಾಸಂಸ್ಥೆಯವರ ಪ್ರೋತ್ಸಾಹ, ಮಾರ್ಗದರ್ಶನ ಸಾಧನೆಗೆ ಪ್ರೇರಣೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿಎಸ್ ಓದಿ ಜೆಇಇ ಪರೀಕ್ಷೆ ಬರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಬಾರಿ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರೀತಂ ಎರಡನೇ ಸ್ಥಾನಿಯಾಗಿದ್ದ.