ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ

ಲೋಕಬಂಧು ನ್ಯೂಸ್ | ಬೆಂಗಳೂರು, ಮೇ 13
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ (47) ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುನೀತ್ ರಾಜ್‌ಕುಮಾರ್ ಮತ್ತು ಚಿರಂಜೀವಿ ಸರ್ಜಾ ಸಾಲಿಗೆ ಇದೀಗ ದಿಲೀಪ್ ರಾಜ್ ಸೇರ್ಪಡೆಯಾಗಿರುವುದು ಕನ್ನಡಿಗರು ಮತ್ತು ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದ ತೀವ್ರ ನೋವುಂಟುಮಾಡಿದೆ.


ಮನೆಯಲ್ಲಿದ್ದ ವೇಳೆ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದ ದಿಲೀಪ್ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.


ನಟ, ನಿರ್ಮಾಪಕನಾಗಿ ಸ್ಯಾಂಡಲ್‌ವುಡ್‌ನಲ್ಲಿ ಖ್ಯಾತಿ ಪಡೆದು, ಕಷ್ಟಪಟ್ಟು ಚಿತ್ರರಂಗಕ್ಕೂ ಬಂದ ದಿಲೀಪ್ ರಾಜ್, 2005ರಲ್ಲಿ ‘ಬಾಯ್ ಫ್ರೆಂಡ್’ ಸಿನಿಮಾ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದರು. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಮಿಲನ’ದಲ್ಲಿನ ನಟನೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು. ನಂತರ ‘ಯೂ-ಟರ್ನ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದರು.


ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ದಿಲೀಪ್ ದೊಡ್ಡ ಹೆಸರು ಮಾಡಿದ್ದರು. ಇತ್ತೀಚೆಗೆ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಎಜೆ (ಅಭಿನವ್ ಜಗನ್ನಾಥ್) ಪಾತ್ರದ ಮೂಲಕ ಮನೆಮಾತಾಗಿದ್ದರು. ನಟನೆಯ ಜೊತೆಗೆ ನಿರ್ಮಾಪಕರಾಗಿಯೂ ಯಶಸ್ವಿಯಾಗಿದ್ದ ಅವರು ‘ಪಾರು’, ‘ನಾ ನಿನ್ನ ಬಿಡಲಾರೆ’ ಮೊದಲಾದ ಜನಪ್ರಿಯ ಧಾರಾವಾಹಿಗಳನ್ನು ನಿರ್ಮಿಸಿದ್ದರು.