ಲೋಕಬಂಧು ನ್ಯೂಸ್ | ಉಡುಪಿ, ಮೇ 15
ಮಾಜಿ ಪ್ರಧಾನಮಂತ್ರಿ ದಿ.ಇಂದಿರಾ ಗಾಂಧಿ ಬಗ್ಗೆ ಸುಳ್ಳು ಸುದ್ದಿಯನ್ನು ತಮ್ಮ ಅಧಿಕೃತ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿತು.
ಸಚಿವರಾಗಿ ಕಾರ್ಯನಿರ್ವಹಿಸಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಸುಳ್ಳು ಸುದ್ದಿಯನ್ನು ಪರೀಶೀಲಿಸದೇ ತಮ್ಮ ಅಧಿಕೃತ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿರುವುದು ಅಕ್ಷಮ್ಯ ಅಪರಾಧ.
ದೇಶಕ್ಕೆ ಇಂದಿರಾ ಗಾಂಧಿ ಕೊಡುಗೆ ಅಪಾರ. ಅಂಥ ಮೇರು ನಾಯಕಿಯನ್ನು ಅಪಮಾನ ಮಾಡಿರುವುದು ಶಾಸಕ ಸುನಿಲ್ ಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ಶಾಸಕ ಸುನಿಲ್ ಕುಮಾರ್ ಅವರು ಬಿಜೆಪಿ ಐ.ಟಿ ಸೆಲ್‌ನ ಸುಳ್ಳು ಮಾಹಿತಿಯನ್ನು ಪರಿಶೀಲಿಸಿ ಹಂಚುವುದು ಉತ್ತಮ ಎಂದು ಜ್ಯೋತಿ ಹೆಬ್ಬಾರ್ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಾನು ಭಾಸ್ಕರ್, ಕಾರ್ಕಳ ಪುರಸಭೆ ಮಾಜಿ ಅಧ್ಯಕ್ಷೆಯರಾದ ಶಿವಪ್ರತಿಮಾ ರಾಣೆ ಹಾಗೂ ರೆಹಮತ್, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಚರಿತ್ರಾ ಎಮ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪ ಅಂಚನ್ ಹಾಗೂ ಸಂಧ್ಯಾ ತಿಲಕ್ ರಾಜ್ ಇದ್ದರು.
