'ಗೋ ಬ್ಯಾಕ್ ಲಕ್ಷ್ಮೀ ಅಕ್ಕ': ಬಿಜೆಪಿ ಘೇರಾವ್

ಲೋಕಬಂಧು ನ್ಯೂಸ್ | ಉಡುಪಿ, ಮೇ 16
ರಾಜ್ಯ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲೆಯನ್ನು  ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಉಡುಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ `ಗೋ ಬ್ಯಾಕ್' ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಿಗ್ಗೆ ಉಡುಪಿಯಿಂದ ಮಣಿಪಾಲಕ್ಕೆ ಕೆಡಿಪಿ ಸಭೆಗೆ ಆಗಮಿಸುವ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯರು 'ಗೋ ಬ್ಯಾಕ್ ಲಕ್ಷ್ಮೀ ಹೆಬ್ಬಾಳ್ಕರ್' ಎಂದು ಕೂಗುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.


ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿರುವುದರ ಜೊತೆಗೆ ಹೆಬ್ಬಾಳ್ಕರ್ ಅವರು ಅಪರೂಪಕ್ಕೆ ಎಂಬಂತೆ ಜಿಲ್ಲೆಗೆ ಬರುತ್ತಿದ್ದಾರೆ. ಆ ಮೂಲಕ ಜಿಲ್ಲೆಯ ಜನರ ಸಮಸ್ಯೆಗಳನ್ನೂ ನಿರ್ಲಕ್ಷಿಸುತ್ತಿದ್ದಾರೆ ಎಂದು ಯುವ ಮೋರ್ಚಾ ಕಾರ್ಯಕರ್ತರು ಆರೋಪಿಸಿದರು.


ಅದಕ್ಕೂ ಮೊದಲು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಚಿವೆ ಹೆಬ್ಬಾಳ್ಕರ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಯೋಜನೆ ಹಾಕಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಣಿಪಾಲದ ರಜತಾದ್ರಿಯ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಕೊನೆಯ ಘಳಿಗೆಯಲ್ಲಿ ಕಪ್ಪು ಬಾವುಟ ಪ್ರದರ್ಶನದ ಬದಲು `ಗೋ ಬ್ಯಾಕ್ ಲಕ್ಷ್ಮಿ ಅಕ್ಕ' ಎಂದು ಯುವ ಮೋರ್ಚಾ ಸದಸ್ಯರು ಜೋರಾಗಿ ಕೂಗಿದರು.


ಸಚಿವೆ ಕಾರಿನಲ್ಲಿ ನೇರವಾಗಿ ಕೆಡಿಪಿ ಸಭೆಗೆ ತೆರಳಿದರು.