ಲೋಕಬಂಧು ನ್ಯೂಸ್ | ಉಡುಪಿ, ಮೇ 15
ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿರುವ ಬಿಜೆಪಿ, ಮೇ 16ರಂದು ಜಿಲ್ಲೆಗೆ ಆಗಮಿಸುತ್ತಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
2023ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಉಡುಪಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ್ ಬಸ್ ಯೋಜನೆಯಲ್ಲಿ 40ಕ್ಕೂ ಹೆಚ್ಚು ಬಸ್ಸುಗಳಿದ್ದು ಇಂದು ಸರ್ಕಾರ ಗ್ಯಾರಂಟಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿ ಶೇ. 50ರಷ್ಟು ಬಸ್‌ಗಳನ್ನು ಕಡಿತಗೊಳಿಸಿದೆ.
ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸದೆ ಜಿಲ್ಲೆಯ ಬಡರೋಗಿಗಳ ಜೀವದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಟವಾಡುತ್ತಿದೆ.
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಅನುದಾನ ನೀಡುವ ಭರವಸೆ ನೀಡಿ, ನಂತರ ಬಿಡಿಕಾಸು ನೀಡದೆ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡಿದೆ.
ಕಂದಾಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಭೂಮಾಪಕರ ಬಹುಕಾಲದ ಬೇಡಿಕೆಯನ್ನು ಈಡೇರಿಸದೆ ಸತತ ಎರಡು ತಿಂಗಳಿಂದ ಭೂಮಾಪಕರು ಮುಷ್ಕರ ನಡೆಸುತ್ತಿದ್ದು, ಜನರಿಗೆ ಅನ್ಯಾಯವಾಗುತ್ತಿದ್ದರೂ ಜಾಣಕುರುಡುತನ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ನಿರ್ಲಕ್ಷಿಸುತ್ತ ಬಂದಿದ್ದು ಎಲ್ಲ ಸಮಸ್ಯೆಗಳನ್ನು ಸರಿಪಡಿಸುವಂತೆ ಅಗ್ರಹಿಸಿ ಮೇ 16ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲಾಗುವುದು ಎಂದರು.
ಸುದ್ದಿಗೋಷ್ಟಿಯಲ್ಲಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ ಮೊದಲಾದವರಿದ್ದರು.
