ಲೋಕಬಂಧು ನ್ಯೂಸ್ ಬೆಂಗಳೂರು, ಮೇ 28
ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ರಾಜೀನಾಮೆ ನೀಡಿರುವುದಾಗಿ ಸ್ವತಃ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ.
ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ ತನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಹಸ್ತಾಂತರಿಸಿದರು. ರಾಜ್ಯಪಾಲರು ಅಧಿಕೃತ ಪ್ರವಾಸ ನಿಮಿತ್ತ ಇಂದೋರ್‌ಗೆ ತೆರಳಿದ್ದರಿಂದ ಅವರ ಅನುಪಸ್ಥಿತಿಯಲ್ಲಿ ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿ ಸ್ವೀಕರಿಸಿದರು.
ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಅವರ ಕಾರ್ಯದರ್ಶಿಗೆ ಪತ್ರ ನೀಡಿದ್ದೇನೆ. ಹೈಕಮಾಂಡ್ ನಾಯಕರು ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಪಕ್ಷದ ತೀರ್ಮಾನಕ್ಕೆ ಗೌರವ ನೀಡಿ ನಾನು ರಾಜೀನಾಮೆ ನೀಡಿದ್ದೇನೆ' ಎಂದರು.