ಲೋಕಬಂಧು ನ್ಯೂಸ್ | ಕಾಪು, ಮೇ 5
ಇತ್ತೀಚಿನ ದಿನಗಳಲ್ಲಿ ಕಾಪು ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅಪಘಾತ ತಡೆಗೆ ಸರ್ವಿಸ್ ರಸ್ತೆಯಲ್ಲಿ ವೇಗ ತಡೆ (ಸ್ಪೀಡ್ ಬ್ರೇಕರ್) ಅಳವಡಿಸುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಡೆದ ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅರಣ್ಯ ಮತ್ತು ಕಂದಾಯ ಇಲಾಖೆ 94ಸಿ, 94ಸಿಸಿ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಬೇಕು. ಡೀಮ್ಡ್ ಫಾರೆಸ್ಟ್ ಇರುವ ಸ್ಥಳದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಕಂದಾಯ ಭೂಮಿ ಹಸ್ತಾಂತರಿಸಲು ಕ್ರಮವಹಿಸುವಂತೆ ಸೂಚಿಸಿದರು.
ಕೆಲವೆಡೆ ನೀರಿನ ಸಮಸ್ಯೆ ಹೆಚ್ಚುತ್ತಿದ್ದು ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕೊಳವೆ ಬಾವಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ, ಕಿಂಡಿ ಆಣೆಕಟ್ಟುಗಳ ಸಮರ್ಪಕ ನಿರ್ವಹಣೆ ಬಗ್ಗೆ ಹಾಗೂ ಮುಂಗಾರು ಪ್ರವೇಶಿಸುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಪೂರೈಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಪೂರ್ಣಿಮಾ ಬಿ.ಸಿ, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್, ತಹಶೀಲ್ದಾರ್ ಅನಂತ ಶಂಕರ್ ಹಾಗೂ ಕಾಪು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
